ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ವಿಫಲಯತ್ನ ನಡೆಸಿದರು.
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಯುವ ಮೋರ್ಚಾ ವತಿಯಿಂದ ರೇಸ್‌ಕೋರ್ಸ್ ರಸ್ತೆಯಿಂದ ಕಾವೇರಿ ಕಡೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.
ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ, ಗೋಪಾಲಯ್ಯ, ಉದಯ್ ಬಿ. ಗರುಡಾಚಾರ್, ಎಂ. ಕೃಷ್ಣಪ್ಪ, ಸಿ. ಮುನಿರಾಜು, ಸಿ.ಕೆ. ರಾಮಮೂರ್ತಿ, ಧೀರಜ್ ಮುನಿರಾಜು, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಮುಖಂಡ ಉಮೇಶ್ ಶೆಟ್ಟಿ,
ಎಸ್. ಹರೀಶ್, ಸಪ್ತಗಿರಿಗೌಡ ಮತ್ತಿತರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಬಿಜೆಪಿ ನಾಯಕರ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ.
ಈ ವೇಳೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಜೈಲಿನ ವ್ಯವಸ್ಥೆಯೂ ಭ್ರಷ್ಟಾಚಾರದಲ್ಲೇ ಮುಳುಗಿಹೋಗಿದೆ. ಕಾಂಗ್ರೆಸ್ ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಜೈಲಿನಲ್ಲಿ ವ್ಯವಸ್ಥೆ ಆಗಲು ಸಾಧ್ಯವಿಲ್ಲ.
ಇಸ್ಲಾಮಿನ ಮೂಲಭೂತವಾದಿಗಳಿಗೆ ರಾಜಮರ್ಯಾದೆ ನೀಡಿರುವುದು ದೇಶದ್ರೋಹದ ಕೃತ್ಯ ಎಂದು ಆರೋಪಿಸಿದರು. ರಾಜ್ಯದ ಪ್ರಮುಖ ಭದ್ರತಾ ವೈಫಲ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ,ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ಹಾಟ್ ಲೈನ್ ಮೂಲಕ ಪರಪ್ಪನ ಅಗ್ರಹಾರ ಜೈಲಿನಿಂದ ಪಾಕಿಸ್ತಾನ, ಅಫಘಾನಿಸ್ತಾನಕ್ಕೆ ಕರೆಗಳು ಹೋಗುತ್ತಿವೆ. ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆ.
ಪೊಲೀಸ್ ಠಾಣೆಗಳನ್ನು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ. ಸಿಎಂ ಹಾಗೂ ಸಚಿವರು 2 ವರ್ಷಗಳಿಂದ ಕತ್ತೆ ಕಾಯುತ್ತಿದ್ದಾರಾ ಎಂದು ಪ್ರಶ್ನಿಸಿದರು. ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಭಯೋತ್ಪಾದಕರಿಗೆ ಜೈಲಿನಲ್ಲೇ ಎಲ್ಲ ಅವಶ್ಯ ಸೌಲಭ್ಯ ನೀಡುವ ತೀರ್ಮಾನಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರ ಬಂದ ಹಾಗಿದೆ ಎಂದು ದೂರಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿದೇಶಗಳಿಗೆ ಹೋದಾಗ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಕಗ್ಗೋಲೆ ನಡೆಯುತ್ತಿದೆ ಎಂದು ಭಾಷಣ ಮಾಡಿ ಅಪಮಾನ ಮಾಡುತ್ತಾರೆ.
ಅದರ ಭಾಗವಾಗಿ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ಹಾಗೂ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಯನ್ನು ಸಿದ್ದರಾಮಯ್ಯರ ಸರಕಾರವು ಜೈಲಿನಲ್ಲೇ ಕಲ್ಪಿಸಿದಂತಿದೆ. ಹೀಗೇ ಬಿಟ್ಟರೆ ಸಿದ್ದರಾಮಯ್ಯ ಸರಕಾರ ದೇಶದ್ರೋಹಿಗಳ ಕೇಸನ್ನು ಹಿಂಪಡೆಯಲೂ ಹೇಸುವುದಿಲ್ಲ.
ಬಿ.ವೈ.ವಿಜಯೇಂದ್ರಬಿಜೆಪಿ ರಾಜ್ಯಾಧ್ಯಕ್ಷ

























