ಬೆಳಗಾವಿ: ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮುಂದಿನ ಐಪಿಎಲ್ ಹಾಗೂ ಇತರೆ ಅಂತರರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಕುರಿತು ನಡೆಯುತ್ತಿರುವ ಚರ್ಚೆಗೆ ಸಂಬಂಧಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಹೊಸ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದ ತಂಡ ಬುಧವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಪಂದ್ಯಗಳ ಆಯೋಜನೆಗೆ ಸರ್ಕಾರದ ಸಹಕಾರ ಮತ್ತು ಅನುಮತಿ ಕೋರಿತು.
ಸಭೆ ಬಳಿಕ ಮಾತನಾಡಿದ ಡಿಕೆ ಶಿವಕುಮಾರ್ ಅವರು ಬೆಂಗಳೂರುದಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಐಪಿಎಲ್ ಸೇರಿದಂತೆ ಎಲ್ಲಾ ಪಂದ್ಯಗಳನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಸುವ ಪರಿಪೂರ್ಣ ಬೆಂಬಲವನ್ನು ಸರ್ಕಾರ ನೀಡಲಿದೆ ಎಂದು ಸ್ಪಷ್ಟಪಡಿಸಿದರು.
ಜನಸಂದಣಿ ನಿಯಂತ್ರಣ ಶಿಫಾರಸುಗಳ ಪಾಲನೆ ಕಡ್ಡಾಯ: ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿ ವರದಿಯನ್ನು ಪಾಲಿಸುವುದು ಅನಿವಾರ್ಯ ಎಂದು ಸರ್ಕಾರ ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ ವೆಂಕಟೇಶ್ ಪ್ರಸಾದ್ ನೇತೃತ್ವದ KSCA ತಂಡವು ಸಮಿತಿ ವರದಿಯ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುವ ಭರವಸೆ ನೀಡಿದೆ.
ನಾಳೆ ಸಂಪುಟ ಸಭೆಯಲ್ಲಿ ಚರ್ಚೆ: ಐಪಿಎಲ್ ಪಂದ್ಯಾವಳಿ ಹಾಗೂ ಇತರೆ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
“ಬೆಂಗಳೂರು ಕ್ರಿಕೆಟ್ ಜಗತ್ತಿನ ಪ್ರಮುಖ ಕೇಂದ್ರ. ಪಂದ್ಯಗಳನ್ನು ಹೊರಕ್ಕೆ ಕಳುಹಿಸುವ ಸರ್ಕಾರದ ಉದ್ದೇಶವೇ ಇಲ್ಲ” ಎಂದು ಡಿಕೆ ಶಿವಕುಮಾರ್ ಪುನರುಚ್ಚರಿಸಿದರು.
























