ಕೊಪ್ಪಳ: ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರ್ಯಾಕ್ಟರ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 15ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಹರಪನಹಳ್ಳಿ ತಾಲೂಕಿನ ಹೊನ್ನೆರಹಳ್ಳಿಯಿಂದ ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕಾಗಿ ಸುಮಾರು 20 ಭಕ್ತರು ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮುನಿರಾಬಾದ್ ಟಿ.ಬಿ. ಡ್ಯಾಂ ಹಾಗೂ ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಸಮೀಪ, ಬೆಂಗಳೂರಿನಿಂದ ಅಫಲ್‌ಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಗಾಯಕ ಮ್ಯೂಸಿಕ್ ಮೈಲಾರಿ ಸೇರಿ ನಾಲ್ವರ ವಿರುದ್ಧ ಪೋಕ್ಸೋ ಕೇಸ್..!
ಅಪಘಾತದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಕೆಂಚಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ತೀವ್ರತೆಗೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಭಕ್ತರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತಕ್ಷಣವೇ ಮುನಿರಾಬಾದ್ ಸರ್ಕಾರಿ ಆಸ್ಪತ್ರೆ ಹಾಗೂ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡರು. ಕೆಲಕಾಲ ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ನಂತರ ಪೊಲೀಸರು ವಾಹನ ಸಂಚಾರವನ್ನು ಸುಗಮಗೊಳಿಸಿದರು.
ಇದನ್ನೂ ಓದಿ: ಹಾವಿನ ವಿಷ ಪತ್ತೆಗೆ ಕನ್ನಡಿಗನಿಂದ ಸೋವಿ ಕಿಟ್!
ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪವಿತ್ರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಮೇಲೆ ಸಂಭವಿಸಿದ ಈ ದುರ್ಘಟನೆ ಗ್ರಾಮದಲ್ಲಿ ಶೋಕದ ವಾತಾವರಣವನ್ನುಂಟು ಮಾಡಿದೆ.






















