ಧಾರವಾಡ: ಕಳೆದ ನಾಲ್ಕು ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧಾರವಾಡ ನಗರದ ಶಿವಗಿರಿ ಪ್ರದೇಶದಲ್ಲಿ ನಡೆದಿದೆ. ಈ ಘಟನೆ ಸ್ಥಳೀಯರಲ್ಲಿ ತೀವ್ರ ಬೇಸರ ಮತ್ತು ಆಘಾತವನ್ನುಂಟುಮಾಡಿದೆ.
ಬಳ್ಳಾರಿ ಜಿಲ್ಲೆಯ ಮೂಲದ ಪಲ್ಲವಿ ಕಗ್ಗಲ್ (25) ಮೃತ ಯುವತಿಯಾಗಿದ್ದಾರೆ. ಅವರು ಧಾರವಾಡದಲ್ಲಿ ನೆಲೆಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ನಿರಂತರವಾಗಿ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ಆದರೆ ನೇಮಕಾತಿ ಪ್ರಕ್ರಿಯೆಗಳು ನಿರೀಕ್ಷಿತವಾಗಿ ನಡೆಯದಿರುವುದು ಹಾಗೂ ಭವಿಷ್ಯದ ಕುರಿತು ಉಂಟಾದ ಮಾನಸಿಕ ಒತ್ತಡದಿಂದ ಅವರು ಮನನೊಂದಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಇದನ್ನೂ ಓದಿ: ICSI, CBSE ಸೇರಿದಂತೆ ಎಲ್ಲ ಪಠ್ಯಕ್ರಮ ಶಾಲೆಗಳಲ್ಲಿ ಕನ್ನಡ ಕಡ್ಡಾಯ
ಶಿವಗಿರಿಯ ರೈಲ್ವೆ ಹಳಿಯ ಬಳಿ ಪಲ್ಲವಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ವಿಷಯ ತಿಳಿದ ತಕ್ಷಣ ರೈಲ್ವೆ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಪಲ್ಲವಿ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಶ್ರಮಿಸುತ್ತಿದ್ದು, ಉದ್ಯೋಗ ಸಿಗದ ನಿರಾಸೆಯಿಂದ ಮಾನಸಿಕವಾಗಿ ಕುಗ್ಗಿದ್ದಳು ಎಂಬುದು ತಿಳಿದುಬಂದಿದೆ. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.























