ಕಲಬುರಗಿ: ಬಿಜೆಪಿ ಕಾರ್ಯಕರ್ತೆಯೊಬ್ಬಳು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಜ್ಯೋತಿ ಪಾಟೀಲ್ (35) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ನಂದಿಕೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಮಲ್ಲಿನಾಥ ಬಿರಾದಾರ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಸ್ಕೂಟರ್‌ನಲ್ಲಿ ಅಲ್ಲಿಗೆ ತೆರಳಿದ್ದ ಜ್ಯೋತಿ ಪಾಟೀಲ್, ಮನೆ ಬಾಗಿಲು ಬಡಿದು ಮನೆಯವರನ್ನು ಎಬ್ಬಿಸಿದ್ದಾಳೆ ಎನ್ನಲಾಗಿದೆ. ಆ ಸಮಯದಲ್ಲಿ ಮಲ್ಲಿನಾಥ ಬಿರಾದಾರ್ ಮನೆಯಲ್ಲಿ ಇರಲಿಲ್ಲ. ಅವರ ಪತ್ನಿ ಹಾಗೂ ಮೂವರು ಮಕ್ಕಳು ಮನೆಯೊಳಗಿದ್ದರು.
ಬಾಗಿಲು ತೆಗೆಯುವಷ್ಟರೊಳಗೆ ಜ್ಯೋತಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದು, ನೋಡು ನೋಡುತ್ತಲೇ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಭವಿಸಿದ ಬಳಿಕ ವಿಷಯ ತಿಳಿದ ಮಲ್ಲಿನಾಥ ಬಿರಾದಾರ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ನಿಧನ
ಮೃತ ಜ್ಯೋತಿ ಪಾಟೀಲ್ ಅವರು ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಆಗಿದ್ದಾರೆ. ಶುಕ್ರವಾರ ರಾತ್ರಿ ಸ್ಕೂಟರ್ ಮೂಲಕ ನಂದಿಕೂರ ಗ್ರಾಮಕ್ಕೆ ತೆರಳಿ, ಮಲ್ಲಿನಾಥ ಬಿರಾದಾರ್ ಮನೆಗೆ ಏಕೆ ಬಂದಿದ್ದರು, ಅವರಿಬ್ಬರ ನಡುವೆ ಯಾವ ರೀತಿಯ ಸಂಬಂಧ ಅಥವಾ ವ್ಯವಹಾರ ಇತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಎಲ್ಲ ಅಂಶಗಳು ಇದೀಗ ತನಿಖೆಯ ಕೇಂದ್ರಬಿಂದುವಾಗಿವೆ.
ಘಟನೆಯ ಮಾಹಿತಿ ಪಡೆದ ತಕ್ಷಣ ಫರತಾಬಾದ್ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಾವು ಸಂಭವಿಸಲು ಕಾರಣಗಳ ಕುರಿತು ವಿವಿಧ ಕೋನಗಳಿಂದ ತನಿಖೆ ಕೈಗೊಂಡಿದ್ದಾರೆ. ಮೃತಳ ಕುಟುಂಬ ಸದಸ್ಯರು, ಪರಿಚಿತರು ಹಾಗೂ ಸಂಬಂಧಪಟ್ಟವರನ್ನು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಜಿಪಿಎಸ್ ಟ್ರ್ಯಾಕರ್ ಹೊಂದಿದ್ದ ಹ್ಯೂಗ್ಲಿನ್ ಸೀಗಲ್ ಹಕ್ಕಿ ಸಾವು
ಈ ದುರ್ಘಟನೆ ಸ್ಥಳೀಯ ರಾಜಕೀಯ ವಲಯದಲ್ಲಿ ಹಾಗೂ ಸಾರ್ವಜನಿಕರಲ್ಲಿ ಆಘಾತ ಮೂಡಿಸಿದ್ದು, ಪ್ರಕರಣದ ಹಿನ್ನೆಲೆ ಬಹಿರಂಗವಾಗುವ ನಿರೀಕ್ಷೆ ಇದೆ.
ಸೂಚನೆ: ಮಾನಸಿಕ ಒತ್ತಡ ಅಥವಾ ಸಂಕಷ್ಟದಲ್ಲಿರುವವರು ಸಹಾಯ ಪಡೆಯುವುದು ಅತ್ಯಂತ ಅಗತ್ಯ. ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ. ಅಗತ್ಯವಿದ್ದಲ್ಲಿ ಸ್ಥಳೀಯ ಸಹಾಯವಾಣಿ ಅಥವಾ ವಿಶ್ವಾಸಾರ್ಹ ವ್ಯಕ್ತಿಗಳ ನೆರವು ಪಡೆಯಲು ಮನವಿ.









