ಮೈಸೂರು: ಮೈಸೂರು ನಗರದ ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ನಂಜನಗೂಡು ಮೂಲದ ಮಂಜುಳಾ (28) ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಘಟನೆಯಿಂದ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.
ಘಟನೆ ಗುರುವಾರ ರಾತ್ರಿ ಬಲೂನ್‌ಗೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಸಂಭವಿಸಿತ್ತು. ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಬಲೂನ್ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ತೊಫಿಯ ಗ್ರಾಮದ ಸಲೀಂ (40) ಸ್ಥಳದಲ್ಲೇ ಮೃತಪಟ್ಟಿದ್ದರು. ಸ್ಫೋಟದ ತೀವ್ರತೆಗೆ ಅಲ್ಲಿದ್ದ ಜನರಲ್ಲಿ ಆತಂಕ ಮೂಡಿದ್ದು, ಹಲವರು ಗಾಯಗೊಂಡಿದ್ದರು.
ಇದನ್ನೂ ಓದಿ: ಚಿತ್ರದುರ್ಗ ಬಸ್ ಅಪಘಾತ ಪ್ರಕರಣ : ಬದುಕುಳಿಯದ ಬಸ್ ಚಾಲಕ
ಗಂಭೀರವಾಗಿ ಗಾಯಗೊಂಡಿದ್ದ ಮಂಜುಳಾ ಅವರಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು, ಅವರನ್ನು ತಕ್ಷಣ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ದುರ್ಘಟನೆಯಲ್ಲಿ ಬೆಂಗಳೂರು ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತ್ತ ಮೂಲದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಹಾಗೂ ರಂಜಿತಾ ಎಂಬವರು ಗಾಯಗೊಂಡಿದ್ದು, ಅವರು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿರುವುದರಿಂದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಇದನ್ನೂ ಓದಿ: Train Fare: ಇಂದಿನಿಂದ ರೈಲು ಪ್ರಯಾಣ ದರ ಏರಿಕೆ
ಘಟನಾ ಸ್ಥಳಕ್ಕೆ ಕೆ.ಆರ್. ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಲಿಂಡರ್ ಸ್ಫೋಟಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕ ಸ್ಥಳದಲ್ಲಿ ಗ್ಯಾಸ್ ಸಿಲಿಂಡರ್ ಬಳಸಲಾಗಿತ್ತೇ ಎಂಬ ಅಂಶದ ಮೇಲೂ ಪೊಲೀಸರು ಗಮನ ಹರಿಸಿದ್ದಾರೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುವ ಮೈಸೂರು ಅರಮನೆ ಮುಂಭಾಗ ಈ ರೀತಿಯ ಅಪಾಯಕರ ಘಟನೆ ನಡೆದಿರುವುದು ನಗರಾದ್ಯಂತ ಆತಂಕಕ್ಕೆ ಕಾರಣವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ವ್ಯಾಪಾರ ನಡೆಸುವ ವೇಳೆ ಕಟ್ಟುನಿಟ್ಟಿನ ಸುರಕ್ಷತಾ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆ ಕೇಳಿಬರುತ್ತಿದೆ.























