ಜನವರಿ 10ರಂದು ಮಂಗಳೂರಿನಲ್ಲಿ ಮಹತ್ವದ ಸಭೆ
ದಾಂಡೇಲಿ: ಮಂಗಳೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಹೊಸ ಪ್ರವಾಸೋದ್ಯಮ ನೀತಿ ರೂಪಿಸುವ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮೂರು ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಮಲೆನಾಡು ಭಾಗದ ಜಿಲ್ಲಾಧಿಕಾರಿಗಳ ಮಹತ್ವದ ಸಭೆಯನ್ನು ಜನವರಿ 10ರಂದು ಮಂಗಳೂರಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಭಾನುವಾರ ರಾತ್ರಿ ಕಾರವಾರ ಶಾಸಕ ಸತೀಶ್ ಸೈಲ್ ಅವರ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಈಗಾಗಲೇ ಈ ಭಾಗದ ಶಾಸಕರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಲಾಗಿದೆ ಎಂದರು. ಮಲೆನಾಡು ಹಾಗೂ ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಗೆ ಪಿಪಿಪಿ (Public Private Partnership) ಮಾದರಿಯಲ್ಲಿ ಹೊಸ ನೀತಿ ತರಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ: ಚೆಕ್ ಬೌನ್ಸ್ ಪ್ರಕರಣ: ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ FIR
ಹೊಸ ಪ್ರವಾಸೋದ್ಯಮ ನೀತಿಯಡಿ ಖಾಸಗಿ ಹೂಡಿಕೆದಾರರಿಗೆ ಹೆಚ್ಚಿನ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಲಾಗುವುದು. ಇದರ ಮೂಲಕ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಒತ್ತು ನೀಡುವ ಉದ್ದೇಶ ಸರ್ಕಾರ ಹೊಂದಿದೆ. ಈ ಹಿನ್ನೆಲೆಯಲ್ಲಿ ನಡೆಯುವ ಸಭೆಗೆ ದೇಶೀಯ ಹಾಗೂ ವಿದೇಶಿ ಬಂಡವಾಳ ಹೂಡಿಕೆದಾರರಿಗೆ ಆಹ್ವಾನ ನೀಡಲಾಗುತ್ತಿದ್ದು, ಅವರು ತಮ್ಮ ಬೇಡಿಕೆಗಳು ಹಾಗೂ ಸಲಹೆ–ಸೂಚನೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಿದರು.
ಬಂಡವಾಳ ಹೂಡಿಕೆದಾರರನ್ನು ಆಹ್ವಾನಿಸುವ ಜವಾಬ್ದಾರಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ನೀಡಲಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ, ಪ್ರವಾಸೋದ್ಯಮ ಸಚಿವರು ಹಾಗೂ ವಿಧಾನಸಭಾ ಸಭಾಧ್ಯಕ್ಷರು ಭಾಗವಹಿಸಲಿದ್ದಾರೆ. ಈ ಸಭೆಯ ಸಂಪೂರ್ಣ ಜವಾಬ್ದಾರಿಯನ್ನು ತಾವೇ ಖುದ್ದಾಗಿ ವಹಿಸಿಕೊಂಡಿದ್ದೇನೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ಜೊತೆಗೆ ಸಂಸತ್ ಸದಸ್ಯರು, ಶಾಸಕರು ಹಾಗೂ ಸ್ಥಳೀಯ ಸಂಸ್ಥೆಗಳ ಸದಸ್ಯರಿಗೂ ಆಹ್ವಾನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ: ರಿವೈಂಡ್ 2025: ಮರೆಯಾದ ಮಹನೀಯರು
ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಆರ್‌ಜೆಡ್ (Coastal Regulation Zone) ಅನುಮತಿ ಅಗತ್ಯವಿರುವ ಕುರಿತು ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಷಯದ ಕುರಿತು ಚರ್ಚೆ ನಡೆಸುವುದಕ್ಕಾಗಿಯೇ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಹೇಳಿದರು. ಗೋವಾ ಮಾದರಿಯನ್ನು ಗಮನದಲ್ಲಿಟ್ಟುಕೊಂಡು, ಸಂಪೂರ್ಣವಾಗಿ ಕಾನೂನು ಚೌಕಟ್ಟಿನೊಳಗೇ ಕೆಲಸ ಮಾಡಲಾಗುವುದು. ಸಮುದ್ರ ತೀರ ರಕ್ಷಣೆಗೆ ಇರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಕಾರವಾರ ಏರ್‌ಪೋರ್ಟ್ ನಿರ್ಮಾಣಕ್ಕೆ ಅಗತ್ಯ ಭೂಮಿ ನೀಡಿಕೆ, ಸಂತ್ರಸ್ತರಿಗೆ ಪರಿಹಾರ ಸೇರಿದಂತೆ ಹಲವು ಮಹತ್ವದ ವಿಷಯಗಳಿಗೆ ಈಗಾಗಲೇ ರಾಜ್ಯ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ನೌಕಾದಳದವರೊಂದಿಗೆ ಒಪ್ಪಂದ ಮಾಡಿಕೊಂಡು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.
ಕರಾವಳಿ ಹಾಗೂ ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಅಭಿವೃದ್ಧಿಗೆ ಈ ಸಭೆ ಮಹತ್ವದ ತಿರುವಾಗಲಿದೆ ಎಂಬ ನಿರೀಕ್ಷೆಯನ್ನು ಅವರು ವ್ಯಕ್ತಪಡಿಸಿದರು.









