Home ನಮ್ಮ ಜಿಲ್ಲೆ ಉತ್ತರ ಕನ್ನಡ ಹೊಸ ವರ್ಷಾಚರಣೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಗಿ ಭದ್ರತೆ

ಹೊಸ ವರ್ಷಾಚರಣೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಗಿ ಭದ್ರತೆ

0
65

ದಾಂಡೇಲಿ: ಹೊಸ ವರ್ಷಾಚರಣೆ ಮತ್ತು ಪ್ರವಾಸಿಗರ ಹೆಚ್ಚಳದ ಹಿನ್ನೆಲೆ ಡಿಸೆಂಬರ್ 24ರಿಂದಲೇ ಉತ್ತರ ಕನ್ನಡ ಜಿಲ್ಲೆಾದ್ಯಂತ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ದೀಪನ್ ತಿಳಿಸಿದ್ದಾರೆ.

ಮಂಗಳವಾರ ಕಾರವಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 1300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಪ್ರವಾಸಿಗರ ಸಂಖ್ಯೆ ಹೆಚ್ಚಾಗಿರುವ ಗೋಕರ್ಣ ಹಾಗೂ ಮುರ್ಡೇಶ್ವರ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತೆ ಒದಗಿಸಲಾಗಿದ್ದು, 200ಕ್ಕೂ ಹೆಚ್ಚು ಹೋಂ ಗಾರ್ಡ್‌ಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದರು.

ಇದನ್ನೂ ಓದಿ: ದಾಂಡೇಲಿ: ಹೊಸ ವರ್ಷಾಚರಣೆಗೆ ಪ್ರವಾಸಿಗರ ಭಾರೀ ದಂಡು – ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

31 ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ನಿಗಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅನಮೋಡ, ಮಾಜಾಳಿ ಸೇರಿದಂತೆ ಒಟ್ಟು 31 ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಗೋವಾ ರಾಜ್ಯದ ಗಡಿಯಲ್ಲಿ ಇರುವ ಚೆಕ್‌ಪೋಸ್ಟ್‌ಗಳ ಎರಡು ಕಡೆ, ಜೊತೆಗೆ ನಾಲ್ಕು ಅತಿ ಸೂಕ್ಷ್ಮ ಸ್ಥಳಗಳಲ್ಲಿ ಮತ್ತು ಉಳಿದ ಪ್ರಮುಖ ರಸ್ತೆಗಳಲ್ಲಿರುವ 25 ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಕಟ್ಟುನಿಟ್ಟಿನ ನಿಗಾ ಇಡಲಾಗಿದೆ ಎಂದು ಎಸ್ಪಿ ದೀಪನ್ ಸ್ಪಷ್ಟಪಡಿಸಿದರು.

ಹೋಂಸ್ಟೇ, ರೆಸಾರ್ಟ್‌ಗಳ ಮೇಲೆ ಹದ್ದಿನ ಕಣ್ಣು: ಜಿಲ್ಲೆಯಲ್ಲಿರುವ 500ಕ್ಕೂ ಹೆಚ್ಚು ಹೋಂಸ್ಟೇ, ರೆಸಾರ್ಟ್ ಹಾಗೂ ಲಾಡ್ಜ್‌ಗಳ ಮೇಲೆ ವಿಶೇಷ ನಿಗಾವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ರೈಡ್ ನಡೆಸುವಂತೆ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಜ್ಯುವೇಲರಿ ಶಾಪ್‌ಗಳ ಭದ್ರತೆ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಜಾಗೃತಿ ಅಭಿಯಾನ

ಡ್ರಂಕ್ ಡ್ರೈವ್ ವಿರುದ್ಧ ಕಠಿಣ ಕ್ರಮ: ಕಳೆದ ನಾಲ್ಕು ದಿನಗಳಲ್ಲಿ ಜಿಲ್ಲೆಯಲ್ಲಿ 156 ಡ್ರಂಕ್ ಡ್ರೈವ್ (ಕುಡಿದು ವಾಹನ ಚಾಲನೆ) ಪ್ರಕರಣಗಳು ದಾಖಲಾಗಿವೆ. ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆ ಮುಂದುವರಿಯಲಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ಎಚ್ಚರಿಸಿದರು.

ಕಡಲ ತೀರಗಳಲ್ಲಿ ಹೆಚ್ಚುವರಿ ಭದ್ರತೆ: ಕಾರವಾರ, ಗೋಕರ್ಣ, ಧಾರೇಶ್ವರ, ಕುಮಟಾ, ಹೊನ್ನಾವರ ಹಾಗೂ ಮುರ್ಡೇಶ್ವರದ ಕಡಲ ತೀರ ಪ್ರದೇಶಗಳಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಿರಂತರ ಪೇಟ್ರೋಲಿಂಗ್ ನಡೆಸಲಾಗುತ್ತಿದೆ ಎಂದು ಎಂ.ಎನ್. ದೀಪನ್ ಮಾಹಿತಿ ನೀಡಿದರು.

ಸಾರ್ವಜನಿಕರು ಹಾಗೂ ಪ್ರವಾಸಿಗರು ಕಾನೂನು ಪಾಲಿಸಿ ಪೊಲೀಸರೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.