ಹುಬ್ಬಳ್ಳಿ: ಮರ್ಯಾದಾ ಹತ್ಯೆಯಂತಹ ಪ್ರಕರಣಗಳ ತಡೆಗೆ ಮಾನ್ಯಾ ಹೆಸರಿನಲ್ಲಿ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಕಠಿಣ ಕಾನೂನನ್ನು ಜಾರಿಗೆ ತರುವ ಕುರಿತು ಪರಿಶೀಲಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹಾದೇವಪ್ಪ ಹೇಳಿದರು.
ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ವಿವೇಕಾನಂದ ದೊಡ್ಡಮನಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರ್ಜಾತಿ ವಿವಾಹವಾಗಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇಂತಹ ಘಟನೆಗಳು ಮರುಕಳಿಸದಂತೆ ಮಾನ್ಯಾ ಹೆಸರಿನಲ್ಲಿ ಕಠಿಣ ಕಾಯ್ದೆ ಜಾರಿಗೆ ತರುವ ನಿಟ್ಟಿನಲ್ಲಿ ಮುಂದಿನ ಅಧಿವೇಶನದಲ್ಲಿ ಕ್ರಮ ವಹಿಸಲಾಗುವುದು ಎಂದರು.
ಮನುವಾದದ ಮನಸ್ಸುಗಳನ್ನು ಹತ್ತಿಕ್ಕಲೇಬೇಕು. ಈ ಪ್ರಕರಣದಲ್ಲಿ ಭಾಗಿಯಾಗಿದವರು ಹಾಗೂ ಉತ್ತೇಜನ ನೀಡಿದವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಪ್ರಾಯಕ್ಕೆ ಬಂದ ಯುವಕ-ಯುವತಿ ತಮ್ಮ ಮದುವೆಯ ಆಯ್ಕೆಯ ಸ್ವಾತಂತ್ರ‍್ಯ ಹೊಂದಿರುತ್ತಾರೆ. ಅದು ಮೂಲಭೂತ ಹಕ್ಕು. ಅಂತಹ ಹಕ್ಕನ್ನು ಹತ್ತಿಕ್ಕುವ ವ್ಯಕ್ತಿಗಳನ್ನು ಹಾಗೂ ಬೆಂಬಲಿಸುವವರನ್ನು ಸರ್ಕಾರ ಬಿಡುವುದಿಲ್ಲ ಎಂದರು.
ಸರ್ಕಾರದಿಂದ ಸಂತ್ರಸ್ತರ ಕುಟುಂಬಕ್ಕೆ ಈಗಾಗಲೇ ರೂ. 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಜತೆಗೆ ಕುಟುಂಬದ 8 ಸದಸ್ಯರಿಗೆ ತಲಾ 2 ಲಕ್ಷದಂತೆ ಒಟ್ಟು 16 ಲಕ್ಷ ಮೊತ್ತದ ಚೆಕ್ ಅನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.
ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಎಫ್.ಎಚ್. ಜಕ್ಕಪ್ಪನವರ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಮಣದೀಪ ಜೈನ್, ಆಯುಕ್ತ ರಾಕೇಶಕುಮಾರ, ಜಿಲ್ಲಾಧಿಕಾರಿ ದಿವ್ಯಪ್ರಭು, ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ಅನೇಕರಿದ್ದರು.
ನಿರ್ದಾಕ್ಷಿಣ್ಯ ಕ್ರಮ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಿರ್ಲಕ್ಷ್ಯದ ಬಗ್ಗೆ ಹಲವು ದಲಿತಪರ ಸಂಘಟನೆಗಳು ದೂರು ನೀಡಿವೆ. ಈ ಸಂಬಂಧ ಪರಿಶೀಲನೆ ನಡೆಸಲಾಗುವುದು. ತ್ವರಿತಗತಿಯಲ್ಲಿ ಸರಿಯಾಗಿ ಕ್ರಮಗಳನ್ನು ಕೈಗೊಳ್ಳದಿರುವುದು ಕಂಡು ಬಂದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್.ಸಿ. ಮಹಾದೇವಪ್ಪ ತಿಳಿಸಿದರು.
ಆಸ್ಪತ್ರೆಗೆ ಭೇಟಿ: ಹುಬ್ಬಳ್ಳಿಯ ವಿವೇಕಾನಂದ ಆಸ್ಪತ್ರೆಗೆ ಡಾ.ಎಚ್.ಸಿ. ಮಹಾದೇವಪ್ಪ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ವಿವೇಕಾನಂದ ದೊಡ್ಡಮನಿ ಅವರ ತಾಯಿ ರೇಣವ್ವ ದೊಡ್ಡಮನಿ ಅವರ ಆರೋಗ್ಯ ಹಾಗೂ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಉತ್ತಮ ಚಿಕಿತ್ಸೆ, ಔಷಧಿ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.























