ಹುಬ್ಬಳ್ಳಿ ಯುವತಿಯ ಮರ್ಯಾದಾಗೇಡು ಹತ್ಯೆ: ವಿಶೇಷ ನ್ಯಾಯಾಲಯ

0
4

ತನಿಖೆಗೆ ತ್ವರಿತಗತಿ ನ್ಯಾಯಾಲಯ ರಚನೆ – ಸಂತ್ರಸ್ತರಿಗೆ ನ್ಯಾಯವೇ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆ ಪ್ರಕರಣದ ತ್ವರಿತ ವಿಚಾರಣೆ ನಡೆಸಿ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದೇ ಸರ್ಕಾರದ ಪ್ರಮುಖ ಆದ್ಯತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ (Fast Track Court) ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಪ್ರಕರಣವು ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆ ಪ್ರಕರಣವಾಗಿದ್ದು, ಇದು ಅಟ್ರಾಸಿಟಿ ಕಾಯ್ದೆ ಅಡಿಯಲ್ಲಿ ದಾಖಲಾಗಿರುವುದರಿಂದ 60 ದಿನಗಳ ಒಳಗಾಗಿ ದೋಷಾರೋಪ ಪಟ್ಟಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಸರ್ಕಾರದ ವತಿಯಿಂದ ಖಾಸಗಿ ಪ್ರಾಸಿಕ್ಯೂಟರ್ ನೇಮಕಕ್ಕೆ ಕ್ರಮ ವಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:  ವಿಜಯಲಕ್ಷ್ಮಿಗೆ ಅಶ್ಲೀಲ ಸಂದೇಶ ಪ್ರಕರಣ: ಮತ್ತಿಬ್ಬರ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯಲ್ಲಿ, “ಹೆಣ್ಣುಮಗಳೊಬ್ಬಳ ಸ್ವತಂತ್ರ ನಿರ್ಧಾರಕ್ಕೆ ವಿರುದ್ಧವಾಗಿ ಮದುವೆಗೆ ಬಲವಂತ ಮಾಡುವುದು ಅಥವಾ ಮದುವೆ ನಿರಾಕರಿಸಿದ ಕಾರಣಕ್ಕೆ ಹಿಂಸೆ ನಡೆಸುವುದು, ಜಾತಿಯಾಧಾರಿತ ದೌರ್ಜನ್ಯ, ಹಲ್ಲೆ ಮತ್ತು ಮರ್ಯಾದಾಗೇಡು ಹತ್ಯೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳು. ಇಂತಹ ಘಟನೆಗಳನ್ನು ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಸಹಿಸುವುದಿಲ್ಲ” ಎಂದು ತೀವ್ರವಾಗಿ ಖಂಡಿಸಿದ್ದಾರೆ.

ಮುಂದೆ ಇಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಹಾಗೂ ಜನರಲ್ಲಿ ಕಾನೂನು ಅರಿವು ಮೂಡಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಿಎಂ ಹೇಳಿದ್ದಾರೆ. ಈ ಸಂಬಂಧ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:  ಬಳ್ಳಾರಿ ಫೈರಿಂಗ್ ಪ್ರಕರಣ: ರಾಜಶೇಖರ್​​ಗೆ ತಗುಲಿದ್ದ ಖಾಸಗಿ ಬುಲೆಟ್?

ಇನಾಂ ವೀರಾಪುರದ ಯುವತಿಯ ಹತ್ಯೆ ಪ್ರಕರಣವು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಮಾಜದಲ್ಲಿ ಆಳವಾಗಿ ಬೇರುಬಿಟ್ಟಿರುವ ಜಾತಿ ದೌರ್ಜನ್ಯ ಮತ್ತು ಮರ್ಯಾದಾಗೇಡು ಹತ್ಯೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Previous articleಡಾಲಿ ಪಿಕ್ಚರ್ಸ್‌ನಿಂದ 6ನೇ ಸಿನಿಮಾ ‘ಹೆಗ್ಗಣ ಮುದ್ದು’ ಘೋಷಣೆ