ಧಾರವಾಡ: ಧಾರವಾಡ ಹೊರವಲಯದಲ್ಲಿರುವ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠದ ಕಟ್ಟಡಕ್ಕೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಕರೆ / ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಭಾರೀ ಆತಂಕ ಉಂಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಆವರಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಕಾರ್ಯ ನಡೆಯುತ್ತಿದೆ.
e ಮೇಲ್ ಮೂಲಕ ಹೈಕೋರ್ಟ್ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ತಕ್ಷಣವೇ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನದಳ ಸಿಬ್ಬಂದಿ ಆಗಮಿಸಿ ಕಟ್ಟಡದ ಒಳಭಾಗ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೂಕ್ಷ್ಮ ತಪಾಸಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
ಭದ್ರತಾ ದೃಷ್ಟಿಯಿಂದ ನ್ಯಾಯಾಲಯದ ಸಿಬ್ಬಂದಿ, ವಕೀಲರು ಹಾಗೂ ಸಾರ್ವಜನಿಕರ ಚಲನವಲನವನ್ನು ನಿಯಂತ್ರಿಸಲಾಗಿದ್ದು, ಕೆಲ ಕಾಲ ಹೈಕೋರ್ಟ್ ಕಲಾಪಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಅಧಿಕಾರಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದು, ತಪಾಸಣೆ ಪೂರ್ಣಗೊಂಡ ನಂತರ ಹೆಚ್ಚಿನ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಮಧ್ಯೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಪತ್ತೆಗೆ ಸೈಬರ್ ಕ್ರೈಂ ವಿಭಾಗದ ಸಹಾಯದಿಂದ ತನಿಖೆ ಆರಂಭಿಸಲಾಗಿದೆ.
ಇದನ್ನೂ ಓದಿ: ಐದು ವರ್ಷ ನಾನೇ ಸಿಎಂ: ಹೈಕಮಾಂಡ್ ತೀರ್ಮಾನ ಅಂತಿಮ
ಇಂದು ಬೆಳಗ್ಗೆ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೂ ಇದೇ ರೀತಿಯ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಲಾಪಗಳನ್ನು ಮುಂದೂಡಲಾಗಿತ್ತು. ಅದರ ಬೆನ್ನಲ್ಲೇ ಧಾರವಾಡ ಹೈಕೋರ್ಟ್‌ಗೆ ಬಂದಿರುವ ಈ ಬೆದರಿಕೆ ರಾಜ್ಯಾದ್ಯಂತ ಭದ್ರತಾ ಸಂಸ್ಥೆಗಳ ಆತಂಕ ಹೆಚ್ಚಿಸಿದೆ.









