ತುಮಕೂರು: ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಲಕಿ ಸೇರಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ವಿವರದಂತೆ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ರೂಸರ್ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: Bigg Boss ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ‘ಗಿಲ್ಲಿ’
ಮೃತರ ವಿವರ: ಅಪಘಾತದಲ್ಲಿ ಮೃತಪಟ್ಟವರು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕು ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು: ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35), ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಬಾಲಕಿ ಸಾಕ್ಷಿಯ ಮೃತ್ಯು ಕುಟುಂಬಸ್ಥರನ್ನು ಹಾಗೂ ಗ್ರಾಮಸ್ಥರನ್ನು ತೀವ್ರ ಶೋಕದಲ್ಲಿ ಮುಳುಗಿಸಿದೆ.
ಶಬರಿಮಲೆ ಯಾತ್ರೆಯಿಂದ ವಾಪಸಿ ವೇಳೆ ದುರಂತ: ಮೃತರು ಹಾಗೂ ಗಾಯಗೊಂಡವರು ಶಬರಿಮಲೆಗೆ ತೆರಳಿ ಅಯ್ಯಪ್ಪಸ್ವಾಮಿ ದರ್ಶನ ಮುಗಿಸಿಕೊಂಡು ಮನೆಗೆ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬೆಳಗಿನ ಜಾವ ಚಾಲಕನ ಗಮನ ತಪ್ಪಿದ ಪರಿಣಾಮ ಕ್ರೂಸರ್ ಲಾರಿಗೆ ಢಿಕ್ಕಿ ಹೊಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಧೂಳೆಬ್ಬಿಸಿದ ಟಾಕ್ಸಿಕ್: ಟೀಸರ್‌ನಲ್ಲಿ ಈ ಸೀನ್ ಬೇಕಿತ್ತಾ?
ಏಳು ಮಂದಿಗೆ ಗಂಭೀರ ಗಾಯ: ಅಪಘಾತದಲ್ಲಿ ಗಾಯಗೊಂಡಿರುವ ಏಳು ಮಂದಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಸಮೀಪದ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ: ಘಟನೆಯ ಮಾಹಿತಿ ಪಡೆದ ಕೂಡಲೇ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕಾರಣಗಳ ಕುರಿತು ತನಿಖೆ ಆರಂಭಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿ ಹಾಗೂ ಕ್ರೂಸರ್ ವಾಹನದ ಸ್ಥಿತಿಯನ್ನು ಪರಿಶೀಲಿಸಿ, ಸಿಸಿ ಕ್ಯಾಮೆರಾ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ.
ಈ ಭೀಕರ ಅಪಘಾತದಿಂದ ಯಲಬುರ್ಗಾ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.









