ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿರುವ ಹಿನ್ನೆಲೆಯಲ್ಲಿ, ಸಿಐಡಿ ಅಧಿಕಾರಿ ಶಾಲೋ ಅವರ ನೇತೃತ್ವದ ಎರಡು ತಂಡಗಳು ಹುಬ್ಬಳ್ಳಿಗೆ ಆಗಮಿಸಿದ್ದು ತನಿಖೆಯನ್ನು ಚುರುಕುಗೊಳಿಸಿವೆ.
ಈ ಪ್ರಕರಣಗಳ ತನಿಖೆಗೆ ಹಿರಿಯ ಐಪಿಎಸ್ ದರ್ಜೆಯ ಅಧಿಕಾರಿಯ ನೇತೃತ್ವದ ಸಿಐಡಿ ತಂಡವನ್ನು ರಚಿಸಲಾಗಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು ಈಗಾಗಲೇ ಸಂಬಂಧಿಸಿದ ಎಲ್ಲಾ ಪ್ರಕರಣಗಳ ಕಡತಗಳನ್ನು ಸಿಐಡಿಗೆ ಹಸ್ತಾಂತರಿಸಿದ್ದಾರೆ. ಜನವರಿ 2 ರಿಂದ ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಎಫ್‌ಐಆರ್‌ಗಳು ದಾಖಲಾಗಿದ್ದು, ಆರು ಎಫ್‌ಐಆರ್‌ಗಳ ಸಂಪೂರ್ಣ ಕಡತಗಳನ್ನು ಸಂಗ್ರಹಿಸಿ ಸವಿಸ್ತಾರ ತನಿಖೆ ನಡೆಸಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.
ಇದನ್ನೂ ಓದಿ: ಕರಾವಳಿ ಕರ್ನಾಟಕ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ನೀತಿ: ಕೇರಳ–ಗೋವಾ ಮಾದರಿಯಲ್ಲಿ ಅಭಿವೃದ್ಧಿ – ಡಿ.ಕೆ.ಶಿವಕುಮಾರ್
ಸಿಐಡಿ ತಂಡವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯ ಸಂಗ್ರಹ, ಸಾಕ್ಷಿದಾರರ ವಿಚಾರಣೆ, ತಾಂತ್ರಿಕ ಮಾಹಿತಿ ಪರಿಶೀಲನೆ ಸೇರಿದಂತೆ ಎಲ್ಲಾ ಅಂಶಗಳನ್ನು ಆಳವಾಗಿ ಪರಿಶೀಲಿಸಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಕರಣದ ಗಂಭೀರತೆ ಹಿನ್ನೆಲೆಯಲ್ಲಿ ತನಿಖೆ ವೇಗವಾಗಿ ನಡೆಯುವ ನಿರೀಕ್ಷೆಯಿದೆ.
ಇನ್ನೊಂದೆಡೆ, ಸುಜಾತಾ ಹಂಡಿ ವಿವಸ್ತ್ರ ಪ್ರಕರಣವನ್ನು ಸಿಐಡಿಗೆ ವಹಿಸಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಪ್ರಕರಣವನ್ನು ನ್ಯಾಯಮೂರ್ತಿಗಳ ನೇತೃತ್ವದ ವಿಶೇಷ ತನಿಖಾ ಸಮಿತಿಗೆ (SIT) ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಸರ್ಕಾರದ ವಿರುದ್ಧ ರಾಜಕೀಯ ಒತ್ತಡ ಹೆಚ್ಚಾದರೂ, ರಾಜ್ಯ ಸರ್ಕಾರ ತನ್ನ ನಿರ್ಧಾರಕ್ಕೆ ಬದ್ಧವಾಗಿದ್ದು, ಸಿಐಡಿ ಮೂಲಕವೇ ತನಿಖೆ ಮುಂದುವರಿಸಲು ತೀರ್ಮಾನಿಸಿದೆ.
ಇದನ್ನೂ ಓದಿ: ಕನ್ನಡಿಗರ ಅಸ್ಮಿತೆಗೆ ಕೇರಳದ ಕುತ್ತು: ಪಿಣರಾಯಿ ವಿಜಯನ್‌ಗೆ ಸಿದ್ದರಾಮಯ್ಯ ‘ಖಡಕ್’ ಎಚ್ಚರಿಕೆ!
ಈ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಸಿಐಡಿ ತನಿಖೆಯ ಫಲಿತಾಂಶದ ಮೇಲೆ ಮುಂದಿನ ರಾಜಕೀಯ ಮತ್ತು ಕಾನೂನು ಬೆಳವಣಿಗೆಗಳು ನಿರ್ಧಾರವಾಗುವ ಸಾಧ್ಯತೆ ಇದೆ.









