ಹುಬ್ಬಳ್ಳಿ: ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಪಿಯುಸಿ ಮೊದಲ ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಗರದ ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಯಾನ್ (17) ಎಂದು ಗುರುತಿಸಲಾಗಿದೆ.
ಮೃತ ಅಯಾನ್ ಕೊಪ್ಪಳ ಜಿಲ್ಲೆಯ ನಿವಾಸಿಯಾಗಿದ್ದು, ಹುಬ್ಬಳ್ಳಿಯಲ್ಲಿ ಖಾಸಗಿ ಇನ್ಸ್ಟಿಟ್ಯೂಟ್‌ನಲ್ಲಿ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅವರು ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು.
ಇದನ್ನೂ ಓದಿ: ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನತೆಯ ಮುಂದಿಡಿ
ಪೊಲೀಸ್ ಮೂಲಗಳ ಪ್ರಕಾರ, ಅಯಾನ್ ರಾತ್ರಿ ಊಟ ಮಾಡಿದ ಬಳಿಕ ಹಾಸ್ಟೆಲ್ ಕಟ್ಟಡದ ಮೇಲ್ಮಹಡಿಗೆ ತೆರಳಿದ್ದನು ಎನ್ನಲಾಗಿದೆ. ಮೂರನೇ ಮಹಡಿಯಲ್ಲಿ ಲಿಫ್ಟ್ ನಿರ್ಮಾಣಕ್ಕಾಗಿ ಬಿಡಲಾಗಿದ್ದ ಕಾಲಿ ಜಾಗದಿಂದ ಕೆಳಗೆ ಬಿದ್ದ ಪರಿಣಾಮ ಅಯಾನ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ಮಹಾನಿಂಗ ನಂದಗಾವಿ ಹಾಗೂ ನವನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸ್ಟೆಲ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಸಂಗ್ರಹಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುವ ಕಾರ್ಯವೂ ನಡೆಯುತ್ತಿದೆ.
ಇದನ್ನೂ ಓದಿ: ಗೋ ಕಟ್ಟೆಯಲ್ಲಿ ಈಜಲು ಹೋಗಿ 10 ವರ್ಷದ ಬಾಲಕ ಸಾವು
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹುಬ್ಬಳ್ಳಿಯ ಕಿಮ್ಸ್ (KMC-RI) ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಯ ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಘಟನೆವೋ, ಅಥವಾ ಇದರಲ್ಲಿ ಬೇರೆ ಯಾರಾದರೂ ಪಾತ್ರವಿದೆಯೇ ಎಂಬ ಕುರಿತು ಇನ್ನೂ ಸ್ಪಷ್ಟತೆ ಲಭ್ಯವಾಗಿಲ್ಲ.
ಈ ಸಂಬಂಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.









