ಹುಬ್ಬಳ್ಳಿ: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ 42,345 ಮನೆಗಳ ಹಂಚಿಕೆ ಕಾರ್ಯಕ್ರಮದ ಎಲ್ಲ ಸಿದ್ಧತೆ ಪೂರ್ಣಗೊಂಡಿದ್ದು ಶನಿವಾರ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ್ ಜಾರಕಿಹೊಳಿ, ಎಚ್.ಸಿ. ಮಹದೇವಪ್ಪ, ಎಚ್.ಕೆ. ಪಾಟೀಲ್, ಕೆ.ಎಚ್. ಮುನಿಯಪ್ಪ, ಸಂತೋಷ್ ಲಾಡ್ ಸೇರಿದಂತೆ ಎಲ್ಲ ಸಚಿವರು ಭಾಗವಹಿಸಲಿದ್ದು ಕಾರ್ಯಕ್ರಮದಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನ ಸೇರಲಿದ್ದಾರೆ ಎಂದರು.
ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣ: ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಹುಬ್ಬಳ್ಳಿ – ಧಾರವಾಡ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳದಿಂದ ಕಾರ್ಯಕ್ರಮಕ್ಕೆ ಜನರು ಆಗಮಿಸಲಿದ್ದಾರೆ. ಇಡೀ ದೇಶಕ್ಕೆ ಈ ಕಾರ್ಯಕ್ರಮದಿಂದ ಸಂದೇಶ ಹೋಗಲಿದೆ ಎಂದರು.
ಏಕಕಾಲದಲ್ಲಿ ರಾಜ್ಯಾದ್ಯಂತ 42,345 ಬಡ ಕುಟುಂಬಗಳಿಗೆ ಮನೆಗಳು ನೀಡುತ್ತಿರುವುದು ಇದೇ ಮೊದಲು. ಈ ಹಿಂದೆ 32,789 ಮನೆ ಹಂಚಿಕೆ ಮಾಡಲಾಗಿತ್ತು. ಮುಂದಿನ ಹಂತದಲ್ಲಿ 30 ಸಾವಿರ ಮನೆ ಹಂಚುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಿಂದ ಇಡೀ ಹುಬ್ಬಳ್ಳಿಯಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ ಎಂದರು.






















