ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶದಾದ್ಯಂತ ರಾಜಕೀಯ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಇಂದು (ಜನವರಿ 28) ಬೆಳಿಗ್ಗೆ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪಕ್ಷಾತೀತವಾಗಿ ರಾಜಕೀಯ ವಲಯದಲ್ಲಿ ಶೋಕದ ಅಲೆ ಹರಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಜಿತ್ ಪವಾರ್ ಅವರ ನಿಧನಕ್ಕೆ ಆಳವಾದ ದುಃಖ ವ್ಯಕ್ತಪಡಿಸಿದ್ದು, “ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ನಾಯಕ. ಅವರ ನಿಧನವು ನನಗೆ ವೈಯಕ್ತಿಕವಾಗಿ ಹಾಗೂ ದೇಶದ ರಾಜಕೀಯಕ್ಕೆ ತುಂಬಲಾರದ ನಷ್ಟ” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ DCM ಅಜಿತ್ ಪವಾರ್ ನಿಧನ
ಅಜಿತ್ ಪವಾರ್ ಅವರ ಚಿಕ್ಕಪ್ಪ ಹಾಗೂ ಎನ್‌ಸಿಪಿ (NCP) ಸ್ಥಾಪಕ ಶರದ್ ಪವಾರ್ ಅವರು ಈ ದುರ್ಘಟನೆಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. “ಈ ದುರಂತವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಜಿತ್ ಯಾವಾಗಲೂ ಉತ್ಸಾಹಿ ಮತ್ತು ಕಷ್ಟಪಟ್ಟು ಕೆಲಸ ಮಾಡುವ ವ್ಯಕ್ತಿಯಾಗಿದ್ದರು. ನನ್ನ ಮಗನನ್ನೇ ಕಳೆದುಕೊಂಡಷ್ಟು ನೋವಾಗುತ್ತಿದೆ” ಎಂದು ಅವರು ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.
ಬಸವರಾಜ ಬೊಮ್ಮಾಯಿ ಸಂತಾಪ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, “ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅಜಿತ್ ಪವಾರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತಕ್ಕೆ ಬೆಂಬಲ ನೀಡಿ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರ ಅಗಲಿಕೆಯಿಂದ ಮಹಾರಾಷ್ಟ್ರ ರಾಜಕಾರಣ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ರಾಜಕಾರಣದ ಇತಿಹಾಸದಲ್ಲಿ ಅಚ್ಚಳಿಯದ ಹೆಸರು ‘ಅಜಿತ್ ಪವಾರ್’
ಜಗದೀಶ್ ಶೆಟ್ಟರ್ ಸಂತಾಪ: ಸಂಸದ ಜಗದೀಶ್ ಶೆಟ್ಟರ್ ಅವರು ಕೂಡ ಅಜಿತ್ ಪವಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, “ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ತಾಂತ್ರಿಕ ದೋಷದಿಂದ ವಿಮಾನ ಪತನಗೊಂಡಿದ್ದು, ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಹಾಗೂ ಸಹ ಪ್ರಯಾಣಿಕರು ಮೃತಪಟ್ಟ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ” ಎಂದು ಹೇಳಿದ್ದಾರೆ.
ಈ ದುರಂತ ಮಹಾರಾಷ್ಟ್ರದ ರಾಜಕೀಯ ಮಾತ್ರವಲ್ಲದೆ ರಾಷ್ಟ್ರಮಟ್ಟದ ರಾಜಕೀಯ ವಲಯಕ್ಕೂ ಆಘಾತ ತಂದಿದ್ದು, ವಿವಿಧ ಪಕ್ಷಗಳ ನಾಯಕರು, ಶಾಸಕರು ಮತ್ತು ಸಾರ್ವಜನಿಕರು ಅಜಿತ್ ಪವಾರ್ ಅವರ ಅಗಲಿಕೆಗೆ ಶೋಕ ವ್ಯಕ್ತಪಡಿಸುತ್ತಿದ್ದಾರೆ.



















