ಬೆಂಗಳೂರು: ಪ್ರಕರಣವೊಂದರಲ್ಲಿ ಹೆಸರು ಸೇರಿಸದಿರಲು ರಿಯಲ್ ಎಸ್ಟೇಟ್ ಉದ್ಯಮಿಯಿಂದ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗೋವಿಂದರಾಜು ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ 2025ರಲ್ಲಿ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಮೊಹಮ್ಮದ್ ಅಕ್ಟರ್ ಅವರ ಹೆಸರನ್ನು ಆರೋಪಿಗಳ ಪಟ್ಟಿಯಲ್ಲಿ ಸೇರಿಸುವುದಾಗಿ ಬೆದರಿಕೆ ಹಾಕಿದ್ದ ಇನ್‌ಸ್ಪೆಕ್ಟರ್ ಗೋವಿಂದರಾಜು, ಪ್ರಕರಣದಿಂದ ಹೆಸರು ತೆಗೆದುಹಾಕಲು ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ಮೊದಲು ₹1 ಲಕ್ಷವನ್ನು ಮುಂಗಡವಾಗಿ ಪಡೆದಿದ್ದ ಗೋವಿಂದರಾಜು, ಉಳಿದ ₹4 ಲಕ್ಷವನ್ನು ನೀಡುವಂತೆ ಒತ್ತಡ ಹಾಕುತ್ತಿದ್ದರು. ಇದರಿಂದ ಅಸಮಾಧಾನಗೊಂಡ ಉದ್ಯಮಿ ಮೊಹಮ್ಮದ್ ಅಕ್ಟರ್ ಲೋಕಾಯುಕ್ತ ಅಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.
ಗುರುವಾರ ಮೈಸೂರು ರಸ್ತೆಯ ಶಿರಸಿ ಸರ್ಕಲ್ ಸಮೀಪದ ಸಿಎಆರ್ ಮೈದಾನದ ಬಳಿ ಉಳಿದ ₹4 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಕಾರ್ಯಾಚರಣೆ ನಡೆಸಿದರು. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ಇನ್‌ಸ್ಪೆಕ್ಟರ್ ಗೋವಿಂದರಾಜು ಅವರನ್ನು ಬಲೆಗೆ ಬೀಳಿಸಲಾಯಿತು.
ಲೋಕಾಯುಕ್ತ ಎಸ್.ಪಿ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಗೋವಿಂದರಾಜು ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇನ್‌ಸ್ಪೆಕ್ಟರ್ ವಿರುದ್ಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟ್ರ್ಯಾಪ್ ಆದ ತಕ್ಷಣ ಇನ್‌ಸ್ಪೆಕ್ಟರ್ ಗೋವಿಂದರಾಜು ‘ಏಯ್..ಏಯ್..’ ಎಂದು ಬೊಬ್ಬಿಟ್ಟು ಹೈಡ್ರಾಮಾ ಮಾಡಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸ್ ಇಲಾಖೆಯೊಳಗಿನ ಭ್ರಷ್ಟಾಚಾರ ಕುರಿತಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.





















