Home Advertisement
Home ನಮ್ಮ ಜಿಲ್ಲೆ ಬೆಂಗಳೂರು ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

0
2

ಬೆಂಗಳೂರು: ಭಾರತೀನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದ 5ನೇ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ 42ನೇ ಎಸಿಜೆಎಂ ಕೋರ್ಟ್ ​ನ್ಯಾಯಾಧೀಶರು ಭಾನುವಾರ ಆದೇಶಿಸಿದ್ದಾರೆ.

ನಗರದ 42ನೇ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರ ಕೋರಮಂಗಲದ ನಿವಾಸಕ್ಕೆ ಭಾನುವಾರ ಬೈರತಿ ಬಸವರಾಜ್ ಅವರನ್ನು ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಕರಣದ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರು ಶಾಸಕರ ಆಂಜಿಯೋಗ್ರಾಮ್ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿದರು. ವರದಿ ಪರಿಶೀಲಿಸಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಬೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಕಳೆದ ಜುಲೈ 15ರಂದು ಬೆಂಗಳೂರಿನ ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ರಾತ್ರಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ನಡೆದಿತ್ತು. ಕಾರಿನಲ್ಲಿ ಬಂದಿದ್ದ 8-9 ಜನ ದುಷ್ಕರ್ಮಿಗಳು ಶಿವಪ್ರಕಾಶ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು.

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್, ಇತರರ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್​ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ, ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿತ್ತು. ಬಳಿಕ ವಿಚಾರಣಾ ನ್ಯಾಯಾಲಯವೂ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು.

ಇದರಿಂದಾಗಿ, ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೈರತಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಕಳೆದ ಗುರುವಾರ ಸುಪ್ರೀಂ ಕೋರ್ಟ್ ಕೂಡ ಅವರ ಅರ್ಜಿಯನ್ನು ವಜಾಗೊಳಿಸಿ, ಹೈಕೋರ್ಟ್​ ಆದೇಶವನ್ನು ಎತ್ತಿಹಿಡಿದಿತ್ತು. ಫೆಬ್ರವರಿ 12ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದು ಸಿಐಡಿ ಸುಪರ್ದಿಗೆ ಒಪ್ಪಿಸಿದ್ದರು.

Previous articleಬಾಂಗ್ಲಾದೇಶ ಪ್ರಧಾನಿ ತಾರಿಖ್ ಪದಗ್ರಹಣಕ್ಕೆ ಮೋದಿ ಹೋಗಲ್ಲ