ಕಾಳಿ ನದಿಯಿಂದ ಕೆರೆ–ಬಾಂದಾರುಗಳಿಗೆ ನೀರು ತುಂಬಿಸುವ ಯೋಜನೆ ಅಂತಿಮ ಹಂತ: ಹಳಿಯಾಳ ರೈತರಿಗೆ ಶೀಘ್ರವೇ ಲಾಭ -ಶಾಸಕ ದೇಶಪಾಂಡೆ
ದಾಂಡೇಲಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಹರಿಯುವ ಕಾಳಿ ನದಿಯಿಂದ ಹಳಿಯಾಳ ತಾಲ್ಲೂಕಿನ ರೈತರ ಅನುಕೂಲಕ್ಕಾಗಿ ಕೆರೆ ಹಾಗೂ ಬಾಂದಾರುಗಳಿಗೆ ನೀರು ತುಂಬಿಸುವ ಮಹತ್ವದ ಯೋಜನೆಯ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದೆ.
ಯೋಜನೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಪರೀಕ್ಷಾ ಕಾರ್ಯಗಳು ಹಾಗೂ ತಾಂತ್ರಿಕ ಪರಿಶೀಲನೆ ನಡೆಸಲಾಗುವುದು. ವಿದ್ಯುತ್ ಪೂರೈಕೆಗೆ ಅನುಮತಿ ದೊರೆತ ತಕ್ಷಣ ಟೆಸ್ಟಿಂಗ್ ಪ್ರಕ್ರಿಯೆ ಪೂರ್ಣಗೊಳಿಸಿ, ಸಂಪೂರ್ಣ ಪ್ರಮಾಣದಲ್ಲಿ ನೀರು ತುಂಬಿಸುವ ಕಾರ್ಯ ಆರಂಭಿಸಲಾಗುವುದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಸ್ಥಳೀಯ ಶಾಸಕ ಆರ್.ವಿ.ದೇಶಪಾಂಡೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
₹36.50 ಕೋಟಿ ಅನುದಾನ – 2547 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಚಿಕ್ಕ ನೀರಾವರಿ ಇಲಾಖೆಯ ಮೂಲಕ ಹಳಿಯಾಳ ವಿಧಾನಸಭಾ ಕ್ಷೇತ್ರಕ್ಕೆ ಸರ್ಕಾರದಿಂದ ಒಟ್ಟು ₹36 ಕೋಟಿ 50 ಲಕ್ಷ ಅನುದಾನ ಮಂಜೂರಾಗಿದ್ದು, ಈ ಯೋಜನೆಯಿಂದ ಸುಮಾರು 2547.90 ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ಈ ಯೋಜನೆ ಪೂರ್ಣಗೊಂಡ ಬಳಿಕ ರೈತರು ಮಳೆಯ ಅವಲಂಬನೆ ಇಲ್ಲದೆ ಬೆಳೆ ಬೆಳೆಯಲು ಸಾಧ್ಯವಾಗಲಿದ್ದು, ಕೃಷಿ ಉತ್ಪಾದನೆ ಹೆಚ್ಚಳವಾಗಲಿದೆ. ಇದರಿಂದ ಗ್ರಾಮೀಣ ಆರ್ಥಿಕತೆಗೆ ಮತ್ತಷ್ಟು ಬಲ ಸಿಗಲಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ವೇಗ: ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಕೂಡ ವೇಗವಾಗಿ ನಡೆಯುತ್ತಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಎತ್ತರದ ಜಲ ಸಂಗ್ರಹಾಗಾರಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಂದ ಗ್ರಾಮಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ.
ಮನೆಮನೆಗೆ ನೀರು ಪೂರೈಕೆಯ ಜವಾಬ್ದಾರಿಯನ್ನು ಜಲಜೀವನ ಮಿಷನ್ ಯೋಜನೆಯಡಿ ಸಂಬಂಧಿತ ಗ್ರಾಮ ಪಂಚಾಯಿತಿಗಳು ನಿರ್ವಹಿಸಲಿವೆ.
ಹಲವೆಡೆ ನಳ ಜೋಡಣೆ ಪೂರ್ಣ: ಈಗಾಗಲೇ ಹಲವು ಗ್ರಾಮಗಳಲ್ಲಿ ನಳ ಜೋಡಣೆ ಕಾರ್ಯ ಪೂರ್ಣಗೊಂಡಿದ್ದು, ತಾತ್ಕಾಲಿಕವಾಗಿ ಬೋರ್‌ವೆಲ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆಯನ್ನು ಬದಲಿಸಿ, ಜಲ ಸಂಗ್ರಹಾಗಾರಗಳಿಂದ ಬರುವ ಬಹು ಗ್ರಾಮ ಕುಡಿಯುವ ನೀರಿಗೆ ಜೋಡಣೆ ಮಾಡಿ ಶಾಶ್ವತ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಸಭೆಯಲ್ಲಿ ಪ್ರಮುಖರ ಉಪಸ್ಥಿತಿ: ಈ ಸಂದರ್ಭದಲ್ಲಿ ವಿ.ಆರ್.ಡಿ.ಎಂ. ಟ್ರಸ್ಟ್ ಆಡಳಿತಾಧಿಕಾರಿ ಪ್ರಕಾಶ ಪ್ರಭು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾ ಪಾಟೀಲ, ಚಿಕ್ಕ ನೀರಾವರಿ ಇಲಾಖೆಯ ಎಇಇ ವಿರೇಶ ಬಿಜಾಪುರ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.






















