ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಉಳ್ಳಾಲ ವ್ಯಾಪ್ತಿಯ ಕಿನ್ಯಾ ಸಂಕೇಶದಲ್ಲಿ ಅತಿವೇಗದ ಚಾಲನೆಯಿಂದ ಸಂಭವಿಸಿದ ಭೀಕರ ಬೈಕ್ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸೋಮವಾರ ಸಂಜೆ ಸುಮಾರು 5 ಗಂಟೆ ಸುಮಾರಿಗೆ ನಡೆದ ಈ ಘಟನೆಯಲ್ಲಿ, ಅತಿವೇಗದಲ್ಲಿ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಕ್ರೀಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಅರ್ಧ ಮುರಿದು ರಸ್ತೆಗೆ ಬಿದ್ದಿದ್ದು, ಸ್ಥಳದಲ್ಲೇ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿ: ನವದೆಹಲಿ-ಚೆನ್ನೈ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಬೆಂಕಿ
ಡಿಕ್ಕಿಯ ರಭಸಕ್ಕೆ ಮುರಿದು ಬಿದ್ದ ವಿದ್ಯುತ್ ಕಂಬ : ಅಪಘಾತದ ತೀವ್ರತೆಯಿಂದಾಗಿ ಬೈಕ್ ಸವಾರರಿಬ್ಬರು ಹಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡಿದವರಲ್ಲಿ ದಿಗ್ಭ್ರಮೆ ಉಂಟುಮಾಡಿದೆ. ಗಾಯಗೊಂಡ ಇಬ್ಬರೂ ವಿಜಯಪುರ ಮೂಲದ ವಿದ್ಯಾರ್ಥಿಗಳಾಗಿದ್ದಾರೆ ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣವೇ ಗಾಯಾಳುಗಳಿಗೆ ಸಹಾಯಕ್ಕೆ ಧಾವಿಸಿದ್ದಾರೆ.
ಖಾಸಗಿ ಆಸ್ಪತ್ರೆಗೆ ದಾಖಲಾತಿ: ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ನೀಡಿದ ಮಾಹಿತಿಯಂತೆ, ಸವಾರರು ಅಪಾಯದಿಂದ ಪಾರಾಗಿದ್ದು, ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಪವಾಡ ಸದೃಶ್ಯವಾಗಿ ಪ್ರಾಣಾಪಾಯದಿಂದ ಪಾರಾಗಿರುವುದು ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ.
ಇದನ್ನೂ ಓದಿ: ಇಮ್ರಾನ್ ಖಾನ್ ಆರೋಗ್ಯಕ್ಕೆ ಜಾಗತಿಕ ಕ್ರಿಕೆಟ್ ದಿಗ್ಗಜರ ಬೆಂಬಲ
ಸಿಸಿಟಿವಿ ದೃಶ್ಯ ವೈರಲ್: ಅಪಘಾತದ ಸಂಪೂರ್ಣ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ. ವಿಡಿಯೋದಲ್ಲಿ ಬೈಕ್ ಅತಿವೇಗದಲ್ಲಿ ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯುವ ದೃಶ್ಯ ಸ್ಪಷ್ಟವಾಗಿ ಕಾಣಿಸುತ್ತದೆ.
ಈ ಘಟನೆ ಅತಿವೇಗದ ಚಾಲನೆಯ ಅಪಾಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.






















