ಸಾಮಾಜಿಕ ಜಾಲತಾಣಗಳಲ್ಲಿ ಜಾಗ್ರತೆ: ಫೋಟೋ, ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮ

0
72

ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಗುರುತಿಸಬಹುದಾದ ಯಾವುದೇ ಮಾಹಿತಿ, ಫೋಟೋ, ವಿಡಿಯೋ ಕ್ಲಿಪಿಂಗ್ ಅಥವಾ ಕುಟುಂಬ ಸದಸ್ಯರ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಪ್ರಕರಣದ ಸಂವೇದನಾಶೀಲತೆಯನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಬಾಲಕಿಯ ಗುರುತು ಬಹಿರಂಗವಾಗುವಂತೆ ಮಾಡುವ ಯಾವುದೇ ಪೋಸ್ಟ್, ವಿಡಿಯೋ ಅಥವಾ ಚಿತ್ರಗಳನ್ನು ಅಪ್ಲೋಡ್ ಮಾಡುವುದಾಗಲಿ, ಶೇರ್ ಮಾಡುವುದಾಗಲಿ ಕಾನೂನುಬದ್ಧ ಅಪರಾಧವಾಗಿದ್ದು, ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಖಮೇನಿ ಹತ್ಯೆ ವಿಚಾರ: ಭಾರತದ ಮೌನದ ಬಗ್ಗೆ ರಾಜಕೀಯ ಚರ್ಚೆ

ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು: ಯಾದಗಿರಿ ಜಿಲ್ಲೆಯ ಗೋಗಿ ಪೊಲೀಸ್ ಠಾಣೆಯಲ್ಲಿ 25-08-2026ರಂದು ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 75(2) ಹಾಗೂ Protection of Children from Sexual Offences Act, 2012 (ಪೋಕ್ಸೋ ಕಾಯ್ದೆ) ಕಲಂ 12ರಡಿ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜಾಗ್ರತೆ ಅಗತ್ಯ: ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಯಾವುದೇ ಫೋಟೋ ಅಥವಾ ವಿಡಿಯೋ ಹಂಚಿಕೊಂಡಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್‌ಪಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ತಿ. ನರಸೀಪುರ ಮೈಸೂರು ರೇಷ್ಮೆ ಕಾರ್ಖಾನೆ ಮುಚ್ಚುವ ಪ್ರಶ್ನೆಯೇ ಇಲ್ಲ

ಪ್ರಕರಣದ ತನಿಖೆ ಮುಂದುವರಿದಿದ್ದು, ಬಾಲಕಿಯ ಗೌಪ್ಯತೆ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ, ಕಾನೂನು ವ್ಯವಸ್ಥೆಗೆ ಸಹಕರಿಸಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ.