ತಮಿಳನಾಡು ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಹುದ್ದೆ: ಕರ್ನಾಟಕಕ್ಕೆ ತಾರತಮ್ಯ
ಬೆಂಗಳೂರು : ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಿರುವ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ತಾರತಮ್ಯ ಮಾಡಿದೆ ಎಂದು ರಾಜ್ಯದ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಮ್. ಬಿ ಪಾಟೀಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತಮಿಳುನಾಡಿಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಕರ್ನಾಟಕದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣದ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
‘ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ’: ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯವಾಗಿ ಘೋಷಿಸಿರುವುದು ನೆರೆಯ ರಾಜ್ಯಕ್ಕೆ ನೀಡಿದ ಆದ್ಯತೆಯ ಉದಾಹರಣೆ ಎಂದು ಎಂ.ಬಿ ಪಾಟೀಲ ಹೇಳಿದರು. “ತಮಿಳುನಾಡಿಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ ಎನ್ನುವಂತಾಗಿದೆ. ಈ ರೀತಿಯ ಧೋರಣೆ ಯಾವತ್ತಿಗೂ ಸರಿಯಲ್ಲ,” ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಿದರು.
ಚುನಾವಣೆ ದೃಷ್ಟಿಯಿಂದ ನಿರ್ಧಾರ? : ತಮಿಳುನಾಡಿನಲ್ಲಿ ನಡೆಯಲಿರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ ಅವರು, ಕರ್ನಾಟಕದ ಬೇಡಿಕೆಯ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ಉದಾಸೀನತೆ ಪ್ರಶ್ನಾರ್ಹವಾಗಿದೆ ಎಂದು ಹೇಳಿದರು.
ಕೇಂದ್ರಕ್ಕೆ ಪತ್ರ ಬರೆದಿದ್ದ ರಾಜ್ಯ ಸರ್ಕಾರ : ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿ ದೃಷ್ಟಿಯಿಂದ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿಸುವಂತೆ ಕೋರಿ 2025ರ ಜೂನ್ 24ರಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರಿಗೆ ಪತ್ರ ಬರೆದಿದ್ದಾಗಿ ಸಚಿವರು ತಿಳಿಸಿದ್ದಾರೆ.
ಆದರೆ ಇಷ್ಟಾದರೂ ರಾಜ್ಯದ ಬೇಡಿಕೆಗೆ ಸ್ಪಂದಿಸದಿರುವುದು ಖೇದಕರ ಎಂದು ಅವರು ಹೇಳಿದರು.
ಕರ್ನಾಟಕದ ಕೇಂದ್ರ ಸಚಿವರು ಧ್ವನಿ ಎತ್ತಲಿ : ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಅವರು ಒಗ್ಗಟ್ಟಾಗಿ ಧ್ವನಿ ಎತ್ತಿ, ರಾಜ್ಯದ ಹಿತಾಸಕ್ತಿಯ ಪರ ನಿಲ್ಲಬೇಕಿದೆ ಎಂದು ಎಂ.ಬಿ ಪಾಟೀಲ ಆಗ್ರಹಿಸಿದ್ದಾರೆ.
ಉತ್ತರ ಕರ್ನಾಟಕ ಅಭಿವೃದ್ಧಿಗೆ ಅಗತ್ಯ: ಹುಬ್ಬಳ್ಳಿ ಅಥವಾ ಬೆಳಗಾವಿ ಎರಡರಲ್ಲಿ ಕನಿಷ್ಠ ಒಂದನ್ನಾದರೂ ತಕ್ಷಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದರಿಂದ ಉತ್ತರ ಕರ್ನಾಟಕದ ವ್ಯಾಪಾರ, ಉದ್ಯಮ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರವು ರಾಜ್ಯದ ಅಗತ್ಯವನ್ನು ಮನಗಂಡು ಶೀಘ್ರದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವರು ಆಗ್ರಹಿಸಿದ್ದಾರೆ.






















