Home Advertisement
Home ಸುದ್ದಿ ರಾಜ್ಯ ವಿಧಾನಸಭೆಯಲ್ಲಿ ಉತ್ತರ ಸಿಗದೆ ಸ್ಪೀಕರ್ ಖಾದರ್ ಅಸಮಾಧಾನ: ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

ವಿಧಾನಸಭೆಯಲ್ಲಿ ಉತ್ತರ ಸಿಗದೆ ಸ್ಪೀಕರ್ ಖಾದರ್ ಅಸಮಾಧಾನ: ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಎಂ ಸೂಚನೆ

0
78

ಬೆಂಗಳೂರು: ರಾಜ್ಯ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸಚಿವರು ಹಾಗೂ ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್​​ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಈ ಬೆಳವಣಿಗೆಯಿಂದಾಗಿ ಕೆಲಕಾಲ ಸದನವನ್ನು ಮುಂದೂಡಲಾಯಿತು.

ಪ್ರಶ್ನೋತ್ತರ ಅವಧಿಯಲ್ಲಿ ಶಾಸಕರು ಕೇಳಿದ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಹಲವು ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳಿಂದ ಸ್ಪಷ್ಟ ಉತ್ತರ ಸಿಗದ ಹಿನ್ನೆಲೆಯಲ್ಲಿ ಸ್ಪೀಕರ್ ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅವರು ಪೀಠದಿಂದಲೇ ಎದ್ದು ಹೊರ ನಡೆದಿದ್ದು, ಸದನದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪೀಕರ್ ಅವರನ್ನು ಮನವೊಲಿಸಿದ ಬಳಿಕ ಪರಿಸ್ಥಿತಿ ಶಮನಗೊಂಡಿತು. ಬಳಿಕ ಸದನದ ಕಲಾಪ ಪುನಃ ಆರಂಭವಾಯಿತು.

ಈ ಘಟನೆಯ ಹಿನ್ನೆಲೆ ಕೆಲವು ಇಲಾಖೆಗಳ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕಂದಾಯ, ಅಲ್ಪಸಂಖ್ಯಾತ ಹಾಗೂ ಸಾರ್ವಜನಿಕ ಕಾಮಗಾರಿಗಳ ಇಲಾಖೆಗಳ ಮೂವರು ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ ಎಂದು ತಿಳಿದುಬಂದಿದೆ.

ಇದಲ್ಲದೆ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ಒದಗಿಸದ ಕೆಲವು ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಸಾರ್ವಜನಿಕ ಕಾಮಗಾರಿಗಳ ಇಲಾಖೆ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ.

ಇದರ ಮಧ್ಯೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಧ್ಯಾಹ್ನ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದು, ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಹಾಗೂ ಸಮಯಕ್ಕೆ ಸರಿಯಾದ ಉತ್ತರ ಒದಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ.

ನಂತರ ಸ್ಪೀಕರ್ ಖಾದರ್ ಮಾತನಾಡಿ, ಸಭೆಯಲ್ಲಿ ಲಿಖಿತ ರೂಪದ ಪ್ರಶ್ನೆಗಳಿಗೆ ಉತ್ತರ ನೀಡುವ ವ್ಯವಸ್ಥೆ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲಾ ಶಾಸಕರಿಗೂ ಅವರ ಪ್ರಶ್ನೆಗಳಿಗೆ ಉತ್ತರ ಸಿಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.