Home Advertisement
Home ನಮ್ಮ ಜಿಲ್ಲೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ : ತನಿಖೆಗೆ ಆದೇಶ

ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ : ತನಿಖೆಗೆ ಆದೇಶ

0
143

ಶಿವಮೊಗ್ಗ: ನಗರದ ಹೊರವಲಯದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಧಾಮದಲ್ಲಿ (Tyavarekoppa Tiger and Lion Safari) ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ಮೇಲೆ ನೀರಾನೆ ದಾಳಿ ನಡೆಸಿದ ಪರಿಣಾಮ ಅವರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ 27 ವರ್ಷದ ಡಾ. ಸಮೀಕ್ಷಾ ರೆಡ್ಡಿ ಈ ದಾಳಿಗೆ ಬಲಿಯಾದವರು.

ಘಟನೆ ಹೇಗೆ ನಡೆಯಿತು?: ಡಾ. ಸಮೀಕ್ಷಾ ರೆಡ್ಡಿ ಅವರು ಮೃಗಾಲಯದಲ್ಲಿ ಪಶುವೈದ್ಯಾಧಿಕಾರಿಯಾಗಿ ಇತ್ತೀಚೆಗಷ್ಟೇ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು. ಗುರುವಾರ ರಾತ್ರಿ ಸುಮಾರು 10:30ರ ವೇಳೆಗೆ ಅವರು ಮೃಗಾಲಯದ ಆಸ್ಪತ್ರೆಗೆ ತೆರಳಿ ಒಂದು ಹಕ್ಕಿಗೆ ಚಿಕಿತ್ಸೆ ನೀಡಿದ್ದರು. ಬಳಿಕ ರಾತ್ರಿ 11:45ರ ಸುಮಾರಿಗೆ ಗರ್ಭಿಣಿ ನೀರಾನೆಯ (Hippopotamus)ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಅದರ ಆವರಣದೊಳಗೆ ಪ್ರವೇಶಿಸಿದ್ದಾರೆ.

ಈ ವೇಳೆ ಏಕಾಏಕಿ ನೀರಾನೆ ದಾಳಿ ನಡೆಸಿದ್ದು, ಅವರು ಗಂಭೀರವಾಗಿ ಗಾಯಗೊಂಡರು.

ಚಿಕಿತ್ಸೆ ಫಲಕಾರಿಯಾಗದೆ ಸಾವು: ಗಾಯಗೊಂಡ ಅವರನ್ನು ತಕ್ಷಣವೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಿಗ್ಗೆ 6:30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉನ್ನತ ಮಟ್ಟದ ತನಿಖೆ : ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದಾರೆ. ಹಿರಿಯ ಪಶುವೈದ್ಯರು ಮತ್ತು ಅರಣ್ಯಾಧಿಕಾರಿಗಳ ತಂಡದಿಂದ ತನಿಖೆ ನಡೆಸಿ 7 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಸಚಿವರು ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವಾಗ ಪ್ರಮಾಣಿತ ಕಾರ್ಯಚರಣೆ ವಿಧಾನ (SOP) ಕಡ್ಡಾಯವಾಗಿ ಪಾಲಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿ ವನ್ಯಜೀವಿಗಳ ಹತ್ತಿರ ಹೋಗುವಾಗ ಹೆಚ್ಚುವರಿ ಜಾಗರೂಕತೆ ವಹಿಸಬೇಕೆಂದು ಎಚ್ಚರಿಕೆ ನೀಡಿದ್ದಾರೆ.

ಸಂತಾಪ: ಈ ದುರಂತದ ಬಗ್ಗೆ ಶೋಕ ವ್ಯಕ್ತಪಡಿಸಿದ ಸಚಿವರು, “ಇದು ಅತ್ಯಂತ ದುಃಖದ ಘಟನೆ. ಮೃತ ವೈದ್ಯೆಯ ಕುಟುಂಬದೊಂದಿಗೆ ಸರ್ಕಾರ ನಿಲ್ಲುತ್ತದೆ. ಅವರ ಕುಟುಂಬಕ್ಕೆ ಈ ನೋವನ್ನು ಸಹಿಸುವ ಶಕ್ತಿ ದೊರಕಲಿ” ಎಂದು ಸಂತಾಪ ಸೂಚಿಸಿದ್ದಾರೆ. ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ಪರಿಹಾರ ನೀಡುವಂತೆ ಸೂಚಿಸಲಾಗಿದೆ.