ದಾಂಡೇಲಿ (ಉತ್ತರ ಕನ್ನಡ): ದಾಂಡೇಲಿ ನಗರದ ಸಮಗ್ರ ಅಭಿವೃದ್ಧಿಗೆ ಮುಂದಾಲೋಚನೆಯೊಂದಿಗೆ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಆರ್ಥಿಕವಾಗಿ ಬಲಪಡಿಸುವ ಕಾರ್ಯ ನಡೆಯುತ್ತಿದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ)–3 ಯೋಜನೆಯಡಿ ದಾಂಡೇಲಿ ನಗರಸಭೆಯಿಂದ ಜೆ.ಎನ್. ರಸ್ತೆಯಲ್ಲಿರುವ ನಗರಸಭೆ ವಸತಿಗೃಹದ ಸಮೀಪ ₹4.26 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ವಾಣಿಜ್ಯ ಸಂಕೀರ್ಣ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲಾಯಿತು.
ನಗರದ ಅಭಿವೃದ್ಧಿ ಕುರಿತು ಮಾತನಾಡಿದ ಅವರು, ದಾಂಡೇಲಿ ಕೇವಲ ಪ್ರವಾಸಿ ಕೇಂದ್ರವಾಗಿಯೇ ಅಲ್ಲದೆ ವ್ಯಾಪಾರಿಕ ಹಾಗೂ ಸಾಮಾಜಿಕವಾಗಿ ಕೂಡ ಬೆಳೆಯಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇಂತಹ ವಾಣಿಜ್ಯ ಸಂಕೀರ್ಣಗಳ ನಿರ್ಮಾಣದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಾಗಲಿವೆ ಎಂದು ಅಭಿಪ್ರಾಯಪಟ್ಟರು.
ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ ಹಾಗೂ ಸ್ವಚ್ಛತಾ ವ್ಯವಸ್ಥೆಗಳನ್ನು ಸುಧಾರಿಸಲು ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರ ಜೀವನಮಟ್ಟವನ್ನು ಹೆಚ್ಚಿಸುವುದು ಸರ್ಕಾರದ ಪ್ರಮುಖ ಗುರಿಯಾಗಿದ್ದು, ನಗರದಲ್ಲಿ ಸಮಗ್ರ ಅಭಿವೃದ್ಧಿ ಸಾಧಿಸಲು ಅಧಿಕಾರಿಗಳು ಹಾಗೂ ಜನರ ಸಹಕಾರ ಅಗತ್ಯವಿದೆ ಎಂದರು.
ಕಾರ್ಯಕ್ರಮದಲ್ಲಿ ಪೌರಾಯುಕ್ತ ವಿವೇಕ ಬನ್ನೆ, ನಿಕಟ ಪೂರ್ವ ಅಧ್ಯಕ್ಷ ಅಷ್ಟಾಕ ಶೇಖ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ರಿಯಾಜ್ ಬಾಬುಸಯ್ಯದ್, ತಾ.ಪಂ. ಇಒ ಟಿ.ಸಿ. ಹಾದಿಮನಿ, ತಹಶೀಲ್ದಾರ್ ಶೈಲೇಶ ಪರಮಾನಂದ ಸೇರಿದಂತೆ ಹಲವರು ಉಪಸ್ಥಿತರಿದ್ದರು.























