ಜೈಪುರ: ರಾಜಸ್ಥಾನದ ಜೈಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಮೃತಪಟ್ಟಿರುವುದು ಸಿನಿ ವಲಯಕ್ಕೆ ಆಘಾತ ತಂದಿದೆ.
ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಮಂಗಳವಾರ ರಾತ್ರಿ ಸುಮಾರು 11:30ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾಲಿಯಾ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ನಂತರ ಸ್ಥಳೀಯರು ತಕ್ಷಣವೇ ರಕ್ಷಣೆ ಕಾರ್ಯ ಕೈಗೊಂಡು, ಗಂಭೀರವಾಗಿ ಗಾಯಗೊಂಡಿದ್ದ ಕಾಲಿಯಾಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಆದರೆ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಅವರು ಮಾರ್ಗ ಮಧ್ಯೆಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ತಲುಪಿದ ಬಳಿಕ ವೈದ್ಯರು ಅವರನ್ನು ಮೃತರೆಂದು ಘೋಷಿಸಿದರು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆ ಪೂರ್ಣಗೊಳಿಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.
ಹರ್ಷಿಲ್ ಕಾಲಿಯಾ ಅವರು ‘Crime Next Door’ ವೆಬ್ ಸರಣಿಯಲ್ಲಿ ಅಭಿನಯಿಸಿದ್ದು, ಸುದ್ದಿ ವಾಹಿನಿಯಲ್ಲಿ ನಿರೂಪಕಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಹಲವಾರು ರಾಜಸ್ಥಾನಿ ಹಾಡುಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಈ ದುರಂತವು ಸಿನಿರಂಗದಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದ್ದು, ಅಭಿಮಾನಿಗಳು ಹಾಗೂ ಸಹೋದ್ಯೋಗಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.























