Home Advertisement
Home ಸುದ್ದಿ ದೇಶ ಮಾರ್ಕಪುರಂ ಬಸ್ ದುರಂತ: 13 ಸಾವು – ಪ್ರಧಾನಿ ಪರಿಹಾರ ಘೋಷಣೆ

ಮಾರ್ಕಪುರಂ ಬಸ್ ದುರಂತ: 13 ಸಾವು – ಪ್ರಧಾನಿ ಪರಿಹಾರ ಘೋಷಣೆ

0
215

ನವದೆಹಲಿ/ಮಾರ್ಕಪುರಂ: ಆಂಧ್ರಪ್ರದೇಶದ ಮಾರ್ಕಪುರಂ ಸಮೀಪ ಸಂಭವಿಸಿದ ಭೀಕರ ಬಸ್ ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪರಿಹಾರ ಘೋಷಿಸಿದ್ದಾರೆ. ಈ ದುರಂತದಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ ತಲಾ ₹2 ಲಕ್ಷ ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಗಾಯಗೊಂಡವರಿಗೆ ₹50,000 ನೆರವು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಕಟಣೆ ನೀಡಿರುವ ಪ್ರಧಾನಿ, “ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರಂತಕರ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದ್ದಾರೆ.

ಈ ದುರ್ಘಟನೆ ಗುರುವಾರ ಬೆಳಗಿನ ಜಾವ ಸಂಭವಿಸಿದ್ದು, ಖಾಸಗಿ ಬಸ್‌ವೊಂದು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಕ್ಷಣವೇ ಬೆಂಕಿ ಹೊತ್ತಿಕೊಂಡಿತ್ತು. ಡಿಕ್ಕಿಯ ತೀವ್ರತೆಗೆ ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ಹಲವರು ಸಜೀವ ದಹನಗೊಂಡಿದ್ದಾರೆ.

ರಕ್ಷಣಾ ಕಾರ್ಯಾಚರಣೆ ನಡೆಸಿದ ತಂಡಗಳು ಹಲವಾರು ಶವಗಳನ್ನು ಹೊರತೆಗೆದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ.

ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಘಟನಾ ಸ್ಥಳದಲ್ಲಿ ತುರ್ತು ಕ್ರಮ ಕೈಗೊಂಡಿದ್ದು, ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.