Home Advertisement
Home ನಮ್ಮ ಜಿಲ್ಲೆ ಬಾಗಲಕೋಟೆ ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ: ಸಿದ್ದರಾಮಯ್ಯ

ಬಾಗಲಕೋಟೆಯಲ್ಲಿ ನಿರೀಕ್ಷೆಗೂ ಮೀರಿ ಜನಬೆಂಬಲ: ಸಿದ್ದರಾಮಯ್ಯ

0
46

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಯವರ ಪರವಾಗಿ ನಿರೀಕ್ಷೆಗೂ ಮೀರಿ ಜನಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಉಪಚುನಾವಣೆಯ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಾತಾವರಣ ಪೂರಕವಾಗಿದೆ. ದಿವಂಗತ ಹೆಚ್.ವೈ. ಮೇಟಿಯವರು ಬಾಗಲಕೋಟೆಯ ಅಭಿವೃದ್ಧಿಗೆ ಶ್ರಮವಹಿಸಿದ್ದರು. ಮೇಟಿಯವರು ಎಲ್ಲ ವರ್ಗದವರ ಏಳಿಗೆಗಾಗಿ ಸೇವೆ ಸಲ್ಲಿಸಿದ ಅಜಾತಶತ್ರುವಾಗಿದ್ದರು. ಸರಳ, ಸಜ್ಜನ ಮೇಟಿಯವರ ಅವರ ನಿಧನದಿಂದ ಖಾಲಿಯಾಗಿರುವ ಶಾಸಕ ಸ್ಥಾನಕ್ಕೆ ಅವರ ಮಗನೇ ಆದ ಉಮೇಶ್ ಮೇಟಿಯವರು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಬಾಗಲಕೋಟೆಯಲ್ಲಿ ಅವರು ಗೆಲ್ಲುವ ವಿಶ್ವಾಸವಿದೆ ಎಂದರು.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನವರೇ ಆಗಿದ್ದ ಪೈಲ್ವಾನ್ ಸಾದಿಕ್ ಅವರ ಮನವೊಲಿಸಿ ಕಣದಿಂದ ಹಿಂದೆ ಸರಿಯುವಂತೆ ಮಾಡಲಾಗಿದೆ. ಸಚಿವ ಜಮೀರ್ ಅಹ್ಮದ್ ಅವರೂ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಬಿಜೆಪಿಯವರು ಸೋಲಿನ ಭೀತಿಯಲ್ಲಿದ್ದಾರೆ: ಸೋಲಿನ ಭಯದಿಂದ ಸಿಎಂ ಅವರು ಬಾಗಲಕೋಟೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡಿದ್ದಾರೆ ಎಂಬ ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸೋಲಿನ ಭೀತಿಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡುವುದು ಕಾಂಗ್ರೆಸ್ ಪಕ್ಷದ ಪ್ರತೀತಿಯಾಗಿದ್ದು, ದಾವಣಗೆರೆ ಹಾಗೂ ಬಾಗಲಕೋಟೆಯಲ್ಲಿ ನಿಧನ ಹೊಂದಿದ ಶಾಸಕರ ಕುಟುಂಬದವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಿಎಂ ಸ್ಥಾನದ ಬಗ್ಗೆ ಬಿಜೆಪಿಯ ಛಲವಾದಿ ನಾರಾಯಣಸ್ವಾಮಿಯವರು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪಕ್ಷದ ಹೈಕಮಾಂಡ್‌ನ ನಿರ್ಧಾರಗಳಿಗೆ ಬದ್ಧನಾಗಿರುತ್ತೇನೆ. ಬಿಜೆಪಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಬಾಗಲಕೋಟೆ ಅಭಿವೃದ್ಧಿಯಾಗಿಲ್ಲ: ಬಿಜೆಪಿಯವರು ತಮ್ಮ ಅವಧಿಯಲ್ಲಿ ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಲೀ, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ರೈತರಿಗೆ ಪರಿಹಾರ ನೀಡಲು ಆದ್ಯತೆ ನೀಡಲಿಲ್ಲ. ಬಾಗಲಕೋಟೆಯ ಅಭಿವೃದ್ಧಿಗೆ ಹೆಚ್.ವೈ. ಮೇಟಿಯವರ ಕೊಡುಗೆ ಅನನ್ಯವಾಗಿದೆ ಎಂದರು.