ಹಾವೇರಿ ಜಿಲ್ಲೆಯ ಕೆರಿಮತ್ತಿಹಳ್ಳಿಯಲ್ಲಿ ಸ್ಥಾಪಿತವಾದ ಹಾವೇರಿ ವಿಶ್ವವಿದ್ಯಾಲಯ ತನ್ನ ಮೊದಲ ಘಟಿಕೋತ್ಸವವನ್ನು ಭರ್ಜರಿಯಾಗಿ ಆಯೋಜಿಸಲು ಸಿದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲೆಯ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲು ನಿರ್ಧರಿಸಲಾಗಿದೆ. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ್ ಜಂಗಮಶೆಟ್ಟಿ ಮಾಹಿತಿ ನೀಡುವಂತೆ, ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಾಹಿತ್ಯ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ.
ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸೇವೆ ಸಲ್ಲಿಸಿರುವ ಶ್ರೀ ಸದಾಶಿವ ಸ್ವಾಮೀಜಿ (ಹುಕ್ಕೇರಿ ಮಠ) ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತದೆ.
ಸಾಮಾಜಿಕ ಸೇವೆ ಹಾಗೂ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರಿಗೆ ಈ ಗೌರವ ದೊರೆಯಲಿದೆ.
ಇದೇ ವೇಳೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಕೃತಿಗಳ ಮೂಲಕ ಗುರುತಿಸಿಕೊಂಡಿರುವ ಸತೀಶ ಕುಲಕರ್ಣಿ ಅವರನ್ನು ಸಹ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.
ಎಂಟು ವಿದ್ಯಾರ್ಥಿಗಳಿಗೆ ಚಿನ್ನದ ಪದಕ: ಹಾವೇರಿ ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವ ಸಮಾರಂಭವನ್ನು ಏಪ್ರಿಲ್ 6ರಂದು ಹಮ್ಮಿಕೊಳ್ಳಲಾಗಿದ್ದು, ಶೈಕ್ಷಣಿಕ ವರ್ಷದಲ್ಲಿ ಉತ್ತಮ ಸಾಧನೆ ಮಾಡಿದ ಎಂಟು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 10 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಲಾಗುತ್ತಿದೆ.























