Home Advertisement
Home ನಮ್ಮ ಜಿಲ್ಲೆ ಕಲಬುರಗಿ ಕಲಬುರಗಿ: ಶಿಕ್ಷಕಿಯ ಕ್ರೂರ ಹತ್ಯೆ – ಶವ ಸುಟ್ಟುಹಾಕಿದ ದುಷ್ಕರ್ಮಿಗಳು

ಕಲಬುರಗಿ: ಶಿಕ್ಷಕಿಯ ಕ್ರೂರ ಹತ್ಯೆ – ಶವ ಸುಟ್ಟುಹಾಕಿದ ದುಷ್ಕರ್ಮಿಗಳು

0
353

ಕಲಬುರಗಿ: ಕಲಬುರಗಿ ಜಿಲ್ಲೆಯ ತಾಲ್ಲೂಕಿನ ಕಮಲಾಪುರ ಸಮೀಪದ ಕಲ್ಮೂಡ ಗ್ರಾಮದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯನ್ನು ಕ್ರೂರವಾಗಿ ಕೊಲೆ ಮಾಡಿ, ಬಳಿಕ ಶವವನ್ನು ಸುಟ್ಟುಹಾಕಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣ ರಾಜ್ಯದಾದ್ಯಂತ ಆತಂಕ ಮೂಡಿಸಿದೆ.

ಮೃತರನ್ನು ಜ್ಯೋತಿ ಕಪಾಳೆ ಹಿರೇಮಠ (57) ಎಂದು ಗುರುತಿಸಲಾಗಿದ್ದು, ಅವರು ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿದ್ದರು. ಅವರು ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂಜರಖೇಡ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಜ್ಯೋತಿ ಅವರು ಸಾಮಾನ್ಯವಾಗಿ ವಾರಕ್ಕೊಮ್ಮೆ ಕಲಬುರಗಿಗೆ ಬಂದು ಮರಳಿ ಬೀದರ್‌ಗೆ ತೆರಳುತ್ತಿದ್ದರು. ಇದೇ ರೀತಿಯಾಗಿ ಪ್ರಯಾಣಿಸುತ್ತಿದ್ದ ವೇಳೆ, ಮಾರ್ಗ ಮಧ್ಯದಲ್ಲಿರುವ ಕಲ್ಮೂಡ ಗ್ರಾಮದ ಬಳಿ ದುಷ್ಕರ್ಮಿಗಳು ಅವರನ್ನು ತಡೆದು ಮಾರಕಾಸ್ತ್ರಗಳಿಂದ ಕೊಲೆಗೈದಿದ್ದಾರೆ ಎನ್ನಲಾಗುತ್ತಿದೆ.

ಕೊಲೆ ಬಳಿಕ ಆರೋಪಿಗಳು ಸುಮಾರು ಐದು ಲೀಟರ್ ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಾರಂಭದಲ್ಲಿ ಅಪರಿಚಿತ ಶವವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ನಂತರ ತನಿಖೆ ವೇಳೆ ಮೃತರ ಗುರುತು ಪತ್ತೆ ಹಚ್ಚಿದ್ದಾರೆ.

ಈ ಪ್ರಕರಣ ಸಂಬಂಧ ಕಮಲಾಪುರ ಪೊಲೀಸ್ ಠಾಣೆ ನಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.