ಧಾರವಾಡ : ಕಳೆದ ಎಂಟು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಜಿಪಂ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಹತ್ವದ ತೀರ್ಪು ಮತ್ತೊಮ್ಮೆ ಮುಂದೂಡಿಕೆಯಾಗಿದೆ.
ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ನ್ಯಾಯಾಲಯವು ತೀರ್ಪನ್ನು ಏಪ್ರಿಲ್ 15ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ : 2016ರ ಜೂನ್ 15ರಂದು ಯೋಗೇಶ್ ಗೌಡ ಅವರನ್ನು ಧಾರವಾಡದಲ್ಲಿ ಭೀಕರವಾಗಿ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂದು ಶಂಕಿಸಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆದರೆ, ಕುಟುಂಬದ ಒತ್ತಾಯದ ಮೇರೆಗೆ 2019ರ ಸೆಪ್ಟೆಂಬರ್‌ನಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಯಿತು.
ಸಿಬಿಐ ತನಿಖೆ ಮತ್ತು ಆರೋಪಗಳು : ಸಿಬಿಐ ತನಿಖೆಯಲ್ಲಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಇದು ರಾಜಕೀಯ ಪ್ರೇರಿತ ಕೊಲೆ ಎಂಬ ಅಂಶ ಬಹಿರಂಗವಾಗಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರನ್ನು 2020ರ ನವೆಂಬರ್ 5ರಂದು ಸಿಬಿಐ ಬಂಧಿಸಿತ್ತು. ನಂತರ ತನಿಖೆ ಪೂರ್ಣಗೊಳಿಸಿ ಒಟ್ಟು 21 ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಾಗಿತ್ತು.
ಪ್ರಸ್ತುತ, ಪ್ರಮುಖ ಆರೋಪಿ ವಿನಯ್ ಕುಲಕರ್ಣಿ ಜಾಮೀನಿನ ಮೇಲೆ ಹೊರಗಿದ್ದಾರೆ.























