ದಾವಣಗೆರೆ: ದಾವಣಗೆರೆ ದಕ್ಷಿಣ ಉಪಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ಆರಂಭವಾಗಿರುವ ಭಿನ್ನಮತಗಳು ಇನ್ನೂ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ.
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಕೆ.ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಜಿಲ್ಲಾ ವಿಭಾಗದ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಮೊಹಮ್ಮದ್ ಸಿರಾಜ್, ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಕೆ.ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಇದರಿಂದ ಮನನೊಂದು ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಮಟ್ಟದ ಐವರು ರಾಜೀನಾಮೆ ನೀಡುತ್ತಿದ್ದೇವೆ. ಕೆಪಿಸಿಸಿ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದರೂ ಪಕ್ಷದ ಸಾಮಾನ್ಯ, ಶಿಸ್ತಿನ ಕಾರ್ಯಕರ್ತರಾಗಿ ಮುಂದುವರೆಯುತ್ತೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ಇ-ಮೇಲ್ ಮೂಲಕ ಕಳಿಸುತ್ತೇವೆ ಎಂದು ಮಾಹಿತಿ ನೀಡಿದರು.
ಕೆಪಿಸಿಸಿ ಕಾರ್ಯದರ್ಶಿಗಳಾದ ಅಬ್ದುಲ್ ಘನಿ ತಾಹೀರ್, ಹುಸೇನ್ ಉಕ್ಕಡಗಾತ್ರಿ, ಉಬೇದುಲ್ಲ ಹಾಗೂ ಜಿಲ್ಲಾ ಕಾರ್ಯಾಧ್ಯಕ್ಷ ಎ.ಅಬ್ದುಲ್ ಜಬ್ಬಾರ್, ಜಿಲ್ಲಾ ಕಾರ್ಯದರ್ಶಿ ಆಸಿಫ್ ಜುನೈದಿ, ನೂರ್ ಅಹ್ಮದ್ ಇನ್ನೂ ಕೆಲವು ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.
ಕೆ.ಅಬ್ದುಲ್ ಜಬ್ಬಾರ್ ಅವರು 45 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರಾಗಿ, ನಾಯಕರಾಗಿ ಕೆಲಸ ಮಾಡಿದ್ದಾರೆ. ಅಂತವರ ವಿರುದ್ಧವೇ ಹಲವಾರು ಆರೋಪ ಮಾಡುವ ಜೊತೆಗೆ ಇಷ್ಟು ವರ್ಷಗಳ ಕಾಲ ನಿಷ್ಠೆಯಿಂದ ನಿರ್ವಹಿಸಿದ್ದ ಅವರಿಗೆ ಮಸಿ ಬಳಿಯುವ ಕೆಲಸ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.






















