ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಅಂತರ್ಜಲ ಮಟ್ಟ ಕುಸಿಯುವ ಭೀತಿ ಎದುರಾಗಿದೆ. ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಕುಡಿಯುವ ನೀರಿನ ತೊಂದರೆ ಉಂಟಾಗುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಕೆರೆಕಟ್ಟೆಗಳು ಬತ್ತಿ ಹೋಗಿವೆ ಹಳ್ಳದಲ್ಲಿ ಹನಿ ನೀರು ಇಲ್ಲ, ಇದಲ್ಲದೇ ರಣ ಬಿಸಿಲು, ಹೀಗಾಗಿ ಅಂತರ್ಜಲ ಕುಸಿದಿದೆ. ಮುಂದಿನ ದಿನಗಳಲ್ಲಿ ಘೋರ ಪರಿಸ್ಥಿತಿ ಎದುರಾಗುತ್ತಿದೆ ಎಂಬ ಆತಂಕ ಆ ಭಾಗದ ಜನರಿಗೆ ಎದುರಾಗಿದೆ.
ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಸಾಯಂಕಾಲದವರೆಗೆ ಜನರು ಮನೆಬಿಟ್ಟು ಹೊರ ಬರಲಾರದ ಪರಿಸ್ಥಿತಿ ತಲೆದೋರಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಉಷ್ಣಾಂಶ ಹೆಚ್ಚುತ್ತಿದೆ. ಮುಂದಿನ 2 ದಿನಗಳಲ್ಲಿ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡಬಹುದೆಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈಗಾಗಲೇ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕವು ಬಿಸಿಲಿನ ಬೇಗೆಗೆ ತತ್ತರಿಸಿದ್ದು, ಮುಂಬರುವ ದಿನಗಳಲ್ಲಿ ಈ ಭಾಗಗಳ ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆಯಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಅನಗತ್ಯವಾಗಿ ಹೊರಗೆ ಬರಬೇಡಿ, ಹೆಚ್ಚು ನೀರು ಸೇವಿಸಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿಯು ಬಿಸಿಲ ಬೇಗೆಯಲ್ಲಿ ಸುಡುತ್ತಿದೆ. ಉತ್ತರ ಕನ್ನಡದಲ್ಲಿ ಇಂದಿನ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇದ್ದು, ಇದು 42 ಡಿಗ್ರಿಗೂ ಏರಿಕೆಯಾಗಬಹುದು.
ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿಯೂ ಹೆಚ್ಚಿನ ತಾಪಮಾನ ದಾಖಲಾಗಿದ್ದು, ಈ ನಡುವೆ ಸಾಧಾರಣ ಮಳೆಯಾಗುವ ಸಂಭವವೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಬಿಸಿ ಗಾಳಿಯ ಎಚ್ಚರಿಕೆ ನೀಡಲಾಗಿದೆ.
ಇನ್ನು ಎಲ್ಲೆಲ್ಲಿ ಒಣ ಹಾವೇ ಅಂತ ನೋಡೋದಾದರೆ, ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗುಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉಳಿದೆಡೆ ಒಣ ಹಾವೇ ಇರಲಿದೆ ಎಂದು ಇಲಾಖೆ ತಿಳಿಸಿದೆ .




















