ಬೆಂಗಳೂರು: 2020ರ ದೆಹಲಿ ದಂಗೆ ಪ್ರಕರಣದಲ್ಲಿ ಯುಎಪಿಎ ಕಾಯ್ದೆಯಡಿ ತಿಹಾರ್ ಜೈಲಿನಲ್ಲಿ ಇರುವ ಉಮರ್ ಖಾಲಿದ್ ಕುರಿತ ಪುಸ್ತಕ ಬಿಡುಗಡೆ ಹಾಗೂ ವಿಚಾರ ಸಂಕಿರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ವಿಚಾರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮವನ್ನು ತಕ್ಷಣವೇ ರದ್ದುಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಜೋಶಿ, “ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗೆ ಸಂಬಂಧಿಸಿದ ಕಾರ್ಯಕ್ರಮಕ್ಕೆ ವೇದಿಕೆ ನೀಡುವುದು ಸೂಕ್ತವಲ್ಲ. ರಾಜ್ಯ ಸರ್ಕಾರ ಸಾರ್ವಜನಿಕ ಸುರಕ್ಷತೆ ಮತ್ತು ಕಾನೂನು ಪಾಲನೆಗೆ ಆದ್ಯತೆ ನೀಡಿ ಅನುಮತಿಯನ್ನು ಹಿಂಪಡೆಯಬೇಕು” ಎಂದು ಹೇಳಿದ್ದಾರೆ.
ಈ ನಡುವೆ, ಬಿಜೆಪಿ ಸಂಸದ ಪಿ.ಸಿ. ಮೋಹನ್ ಅವರು ಕೂಡ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉಮರ್ ಖಾಲಿದ್ ದೆಹಲಿ ದಂಗೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರು. ಇಂತಹ ವ್ಯಕ್ತಿಯನ್ನು ಬೆಂಗಳೂರಿಗೆ ಕರೆಸಿ ವೈಭವೀಕರಿಸುವ ಅಗತ್ಯವೇನು?” ಎಂದು ಪ್ರಶ್ನಿಸಿದರು.
ಅವರು ಕಾರ್ಯಕ್ರಮ ಆಯೋಜಕರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಭಯೋತ್ಪಾದಕರನ್ನು ವೈಭವೀಕರಿಸುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ. ಇತರ ರಾಜ್ಯಗಳಲ್ಲಿ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ಸಿಗುವುದಿಲ್ಲ, ಆದರೆ ಕರ್ನಾಟಕದಲ್ಲಿ ಮಾತ್ರ ಇಂತಹ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿ ನಾಯಕರು ಟೀಕೆ ವ್ಯಕ್ತಪಡಿಸಿದ್ದು, ಭದ್ರತಾ ವಿಷಯದಲ್ಲಿ ಸರ್ಕಾರ ಮೃದು ಧೋರಣೆ ಹೊಂದಿದೆ ಎಂದು ಆರೋಪಿಸಿದ್ದಾರೆ.




















