Home Advertisement
Home ನಮ್ಮ ಜಿಲ್ಲೆ ವಿಜಯನಗರ ವಿಜಯನಗರ: TT ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ

ವಿಜಯನಗರ: TT ವಾಹನಕ್ಕೆ ಲಾರಿ ಡಿಕ್ಕಿ – ಓರ್ವ ಸಾವು, 12 ಮಂದಿಗೆ ಗಾಯ

0
86

ವಿಜಯನಗರ: ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 12 ಮಂದಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ದುರ್ಘಟನೆ ನಡೆದಿದೆ.

ಮಾಹಿತಿ ಪ್ರಕಾರ, ಬೆಂಗಳೂರಿನಿಂದ ಕೂಡ್ಲಿಗಿ ಕಡೆ ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಹೊಡೆದ ರಭಸಕ್ಕೆ ಟಿಟಿ ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಮಧು (27) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ರಿಲಯನ್ಸ್ ಡಿಜಿಟಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಧು ಅವರ ಸಾವಿನಿಂದ ಕುಟುಂಬಸ್ಥರು ಮತ್ತು ಸ್ನೇಹಿತರು ಆಘಾತಕ್ಕೊಳಗಾಗಿದ್ದಾರೆ.

ಗಾಯಗೊಂಡ 12 ಮಂದಿಯನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ಮತ್ತು ಬಳ್ಳಾರಿ ಟ್ರಾಮಾಕೇರ್ ಸೆಂಟರ್‌ಗೆ ತಕ್ಷಣವೇ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅಪಘಾತದ ವಿಷಯ ತಿಳಿದು ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಹಾಗೂ ಸಿಪಿಐ ಪ್ರಹ್ಲಾದ್ ಚನ್ನಗಿರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ತನಿಖೆ ಮುಂದುವರಿದಿದೆ.