ಮಧ್ಯಪ್ರದೇಶದ ಜಬಲ್ಪುರ ಸಮೀಪದ ಬಾರ್ಗಿ ಅಣೆಕಟ್ಟಿನ ಜಲಾಶಯದಲ್ಲಿ ಸಂಭವಿಸಿದ ದೋಣಿ ದುರಂತ ದೇಶವನ್ನೇ ಬೆಚ್ಚಿಬೀಳಿಸಿದೆ. ಸುಮಾರು 30 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಬಲವಾದ ಗಾಳಿಗೆ ಸಿಲುಕಿ ಮುಳುಗಿದ ಪರಿಣಾಮ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು, ಹಲವರು ಇನ್ನೂ ನಾಪತ್ತೆಯಾಗಿದ್ದಾರೆ.
ಭಯಾನಕ ಕ್ಷಣಗಳು – ಗಾಳಿಗೆ ಸಿಲುಕಿ ದೋಣಿ: ಗುರುವಾರ ಸಂಜೆ ಸುಮಾರು 6 ಗಂಟೆ ಸುಮಾರಿಗೆ ದೋಣಿ ಜಲಾಶಯದ ಮಧ್ಯಭಾಗದಲ್ಲಿ ಸಾಗುತ್ತಿದ್ದಾಗ ಏಕಾಏಕಿ ಬಲವಾದ ಗಾಳಿ ಬೀಸಿದೆ. ನೀರು ಪ್ರಕ್ಷುಬ್ಧವಾಗುತ್ತಿದ್ದಂತೆ ದೋಣಿ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ದಡದಿಂದ ದೂರವಿದ್ದ ಕಾರಣ ತಕ್ಷಣ ಮರಳಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತಾಯಿ–ಮಗು ಮರಣದ ದೃಶ್ಯ : ಶುಕ್ರವಾರ ರಕ್ಷಣಾ ಕಾರ್ಯಾಚರಣೆಯ ವೇಳೆ ಘಟನೆಯ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಕೇಶ್ ಸಿಂಗ್, ತಾಯಿ ಮತ್ತು ಮಗು ಶವ ಪತ್ತೆಯಾಗಿದೆ. ತಾಯಿ ತನ್ನ ಮಗುವನ್ನು ಬಿಗಿಯಾಗಿ ಅಪ್ಪಿಕೊಂಡಿದ್ದ ದೃಶ್ಯ ಸ್ಥಳದಲ್ಲಿದ್ದವರ ಕಣ್ಣೀರು ತರಿಸಿತು ಎಂದು ಭಾವುಕರಾದರು.
ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ : State Disaster Response Force (SDRF), ಸ್ಥಳೀಯ ಪೊಲೀಸರು ಮತ್ತು ಆಡಳಿತ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದುವರೆಗೆ 22 ಮಂದಿಯನ್ನು ರಕ್ಷಿಸಲಾಗಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಸರ್ಕಾರದ ಪ್ರತಿಕ್ರಿಯೆ : ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಸಂತ್ರಸ್ತ ಕುಟುಂಬಗಳಿಗೆ ಎಲ್ಲಾ ರೀತಿಯ ಸಹಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಇನ್ನು ಪ್ರವಾಸೋದ್ಯಮ ಸಚಿವ ಧರ್ಮೇಂದ್ರ ಭಾವ್ ಸಿಂಗ್ ಲೋಧಿ ರಕ್ಷಣಾ ಕಾರ್ಯಾಚರಣೆಯ ನಂತರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಪರಿಹಾರ ಘೋಷಣೆ: ಇನ್ನು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿ ಪರಿಹಾರ ಘೋಷಣೆ ಮಾಡಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ ಮಧ್ಯಪ್ರದೇಶದ ಜಬಲ್ಪುರದಲ್ಲಿ ದೋಣಿ ಮುಳುಗಿ ಸಂಭವಿಸಿದ ಸಾವು ಅತ್ಯಂತ ನೋವಿನ ಸಂಗತಿ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ




















