ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಇಂದು (ಮೇ 2) ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯುತ್ತಿದ್ದು, ಒಟ್ಟು 1,822 ಅಂಚೆ ಮತಗಳನ್ನು ಮರು ಪರಿಶೀಲನೆಗೆ ಒಳಪಡಿಸಲಾಗಿದೆ.
ಈ ಮರು ಎಣಿಕೆ ಕ್ಷೇತ್ರದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿ ಅಭ್ಯರ್ಥಿ ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು.
ಅತ್ಯಲ್ಪ ಮತಗಳ ಅಂತರದಿಂದ ಸೋಲು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್ ಅವರು ಅಂಚೆ ಮತಗಳ ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯದ ಆದೇಶದಂತೆ ಇದೀಗ ಮರು ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಆದರೆ ಮರು ಎಣಿಕೆ ಪ್ರಕ್ರಿಯೆಗೆ ಮುನ್ನವೇ ಅಂಚೆ ಮತಗಳ ಬಾಕ್ಸ್‌ನ ಸೀಲ್ ತೆರೆಯಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರು ಮರು ಎಣಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
“ಮತಗಳಿರುವ ಬಾಕ್ಸ್ ಮೊದಲೇ ಓಪನ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಟ್ಯಾಂಪರ್ ಮಾಡಿರುವ ಶಂಕೆ ಇದೆ. ಈ ವಿಷಯವನ್ನು ಹೈಕೋರ್ಟ್ ಗಮನಕ್ಕೆ ತಂದು ನಂತರವೇ ಎಣಿಕೆ ನಡೆಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ. ಈ ಬೆಳವಣಿಗೆ ಶೃಂಗೇರಿ ಕ್ಷೇತ್ರದಲ್ಲಿ ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿದ್ದು, ಮರು ಎಣಿಕೆಯ ಫಲಿತಾಂಶದತ್ತ ಎಲ್ಲರ ಕಣ್ಣು ನೆಟ್ಟಿದೆ.























