ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಕೇವಲ ಎರಡು ದಿನಗಳು ಕಳೆದಿವೆ, ಅಷ್ಟರಲ್ಲೇ ರಾಜ್ಯದಲ್ಲಿ ಆತಂಕಕಾರಿ ಬೆಳವಣಿಗೆಯೊಂದು ನಡೆದಿದೆ. ಸಂದೇಶ್‌ಖಾಲಿಯಲ್ಲಿ ಭುಗಿಲೆದ್ದಿರುವ ಭಾರೀ ಹಿಂಸಾಚಾರದಿಂದಾಗಿ ಇಡೀ ಪ್ರದೇಶವೇ ಬೆಚ್ಚಿಬಿದ್ದಿದೆ. ಮಂಗಳವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಐವರು ಪೊಲೀಸ್ ಅಧಿಕಾರಿಗಳು ಹಾಗೂ ಕೇಂದ್ರ ಪಡೆಗಳ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಈ ಘಟನೆ ನಡೆದಿದ್ದು ನಜತ್ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಬೇರಿಯಾ ಅಗರಾಹಟಿ ಗ್ರಾಮ ಪಂಚಾಯಿತಿಯ ವಾರ್ಡ್ ನಂಬರ್ 14ರ ಬಮನ್ ಘೇರಿ ಎಂಬ ಪ್ರದೇಶದಲ್ಲಿ. ಮಂಗಳವಾರ ಮಧ್ಯಾಹ್ನದಿಂದಲೇ ಆ ಪ್ರದೇಶದಲ್ಲಿ ರಾಜಕೀಯ ಅಶಾಂತಿಯ ವಾತಾವರಣ ನಿರ್ಮಾಣವಾಗಿತ್ತು. ಇದೇ ಕಾರಣಕ್ಕೆ ಭದ್ರತಾ ಸಿಬ್ಬಂದಿ ತೀವ್ರ ನಿಗಾ ವಹಿಸಿದ್ದರು.
ಘಟನೆಯ ವಿವರವೇನೆಂದರೆ, ಪೊಲೀಸ್ ತಂಡ ಮತ್ತು ಕೇಂದ್ರ ಸಶಸ್ತ್ರ ಪಡೆಗಳು ರಾತ್ರಿ ಗಸ್ತು ತಿರುಗುತ್ತಿದ್ದಾಗ, ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಕೃತ್ಯದಲ್ಲಿ ನಜತ್ ಪೊಲೀಸ್ ಠಾಣೆಯ ಇನ್‌ಚಾರ್ಜ್ ಭರತ್ ಪುರ್ಕೈತ್, ರಾಜ್‌ಬಾರಿ ಹೊರಠಾಣೆಯ ಸಿಬ್ಬಂದಿ ಭಸ್ವತ್ ಗೋಸ್ವಾಮಿ, ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಇಬ್ಬರು ಸಿಆರ್‌ಪಿಎಫ್ ಜವಾನರಿಗೆ ಗುಂಡೇಟು ಬಿದ್ದಿದೆ. ಕೂಡಲೇ ಕಾರ್ಯಪ್ರವೃತ್ತರಾದ ಸಹೋದ್ಯೋಗಿಗಳು ಗಾಯಾಳುಗಳನ್ನು ಮಿನಾಖಾ ಗ್ರಾಮೀಣ ಆಸ್ಪತ್ರೆಗೆ ಸಾಗಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಈ ಘಟನೆಯ ನಂತರ ಸಂದೇಶ್‌ಖಾಲಿ ವಿಧಾನಸಭಾ ಕ್ಷೇತ್ರದಾದ್ಯಂತ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಅಹಿತಕರ ಘಟನೆಗಳು ನಡೆಯದಂತೆ ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನ್ ಕುಮಾರ್, ಹಿಂಸಾಚಾರವನ್ನು ಹತ್ತಿಕ್ಕಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು ಸೇರಿದಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ನಿರಂತರ ಗಸ್ತು ತಿರುಗಬೇಕೆಂದು ಸೂಚಿಸಿದ್ದಾರೆ. ಹಿಂಸಾಚಾರದಲ್ಲಿ ತೊಡಗುವವರು ಅಥವಾ ಅಶಾಂತಿ ಸೃಷ್ಟಿಸುವವರ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಂಡು ಬಂಧಿಸಬೇಕೆಂದು ಚುನಾವಣಾ ಆಯೋಗ ಸ್ಪಷ್ಟ ನಿರ್ದೇಶನ ನೀಡಿದೆ.




















