ಕಲಬುರಗಿ: ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣ ಗೊಳಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಗಡಿ ಗುರುತಿಸುವ ಪ್ರಕ್ರಿಯೆಗೆ ಸಂಬಂಧಿಸಿದ ಆಕ್ಷೇಪಣೆ ಸಲ್ಲಿಸುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಿದರು.
ಗ್ರಾಮ ಪಂಚಾಯತ್ ನಂತರ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ: ಗ್ರಾಮ ಪಂಚಾಯತ್ ಚುನಾವಣೆ ಪೂರ್ಣಗೊಂಡ ಬಳಿಕ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನೂ ಹಂತ ಹಂತವಾಗಿ ನಡೆಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. “ಗ್ರಾಮ ಪಂಚಾಯತ್ ಚುನಾವಣೆ ನಂತರ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೂ ಸರ್ಕಾರ ಸಿದ್ಧತೆ ನಡೆಸುತ್ತಿದೆ,” ಎಂದು ಅವರು ತಿಳಿಸಿದರು.
ಕುಡಿಯುವ ನೀರಿಗೆ ಅನುದಾನದ ಕೊರತೆ ಇಲ್ಲ: ಬೇಸಿಗೆ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಖರ್ಗೆ, “ಕುಡಿಯುವ ನೀರಿನ ಕಾಮಗಾರಿಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ,” ಎಂದು ಹೇಳಿದರು. ಜಿಲ್ಲೆಯ 21 ಗ್ರಾಮಗಳಲ್ಲಿ ಹೊಸ ಬೋರ್‌ವೆಲ್‌ಗಳನ್ನು ಕೊರೆಯಲಾಗಿದ್ದು, ಇನ್ನೂ ನಾಲ್ಕು ಹಳ್ಳಿಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಹೆಚ್ಚುವರಿ ಅನುದಾನ ಬಿಡುಗಡೆ : ಪ್ರತಿ ಜಿಲ್ಲೆಗೆ ₹5 ಕೋಟಿ ಅನುದಾನ ಒದಗಿಸಲಾಗಿದೆ. ಅಗತ್ಯವಿದ್ದರೆ ಹೆಚ್ಚುವರಿ ಅನುದಾನವನ್ನೂ ಬಿಡುಗಡೆ ಮಾಡಲಾಗುವುದು ಎಂದು ಖರ್ಗೆ ಹೇಳಿದರು. ಇದಲ್ಲದೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ (ಕೆಕೆಆರ್‌ಡಿಬಿ) ವತಿಯಿಂದ ₹17.30 ಕೋಟಿ ಅನುದಾನ ಸಹ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಟಾಸ್ಕ್ ಫೋರ್ಸ್ ರಚನೆ : ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ ಎಂದು ಸಚಿವರು ಹೇಳಿದರು. “ಶಾಸಕರು ಸೂಚಿಸುವ ಆದ್ಯತೆ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ಅವರು ತಿಳಿಸಿದರು.
ಭೀಮಾ ನದಿಯಿಂದ ನೀರು ಬಿಡುಗಡೆಗೆ ಒತ್ತಾಯ : ಬೇಸಿಗೆ ಸಂದರ್ಭದಲ್ಲಿ ನೀರಿನ ಕೊರತೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಿಂದ ಭೀಮಾ ನದಿಯ ನೀರು ಬಿಡುಗಡೆ ಮಾಡಲು ಮನವಿ ಮಾಡಲಾಗಿದೆ ಎಂದು ಖರ್ಗೆ ಹೇಳಿದರು. ಈ ಸಂದರ್ಭದಲ್ಲಿ ಎಂ.ವೈ.ಪಾಟೀಲ, ಹಾಗೂ ಬಿ.ಆರ್.ಪಾಟೀಲ ಸಹ ಉಪಸ್ಥಿತರಿದ್ದರು ಎಂದು ಹೇಳಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖರ್ಗೆ, “ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ,” ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಲಬುರಗಿದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ,ವಿಧಾನಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂಖಾನ್, ಗ್ಯಾರಂಟಿ ಅನುಷ್ಠಾನಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಿಕಾ ಪರಮೇಶ್ವರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





















