Home Advertisement
Home ಕ್ರೀಡೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿಜಯಪುರ ಸಜ್ಜು

ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿಜಯಪುರ ಸಜ್ಜು

0
42

ಯುವ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುವ ರಾಜ್ಯ ಮಟ್ಟದ ಕ್ರೀಡಾಕೂಟ: ವಿಜಯಪುರದಲ್ಲಿ ವಾರಪೂರ್ತಿ ಬ್ಯಾಡ್ಮಿಂಟನ್ ಹಬ್ಬ

ವಿಜಯಪುರ: ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ವಿಜಯಪುರ ನಗರ ಸಜ್ಜುಗೊಂಡಿದ್ದು, ಮೇ 17ರಿಂದ 23ರವರೆಗೆ ಭರ್ಜರಿ ಪಂದ್ಯಾವಳಿ ನಡೆಯಲಿದೆ. ನಗರದ BLDE ಒಳಾಂಗಣ ಕ್ರೀಡಾಂಗಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣಗಳಲ್ಲಿ ಈ ರಾಜ್ಯ ಮಟ್ಟದ ಟೂರ್ನಿ ಆಯೋಜಿಸಲಾಗಿದೆ.

ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ (KBA) ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಲಿರುವ ಈ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ 15ರಿಂದ 17 ವರ್ಷದೊಳಗಿನ ಯುವ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.

ಪಂದ್ಯಾವಳಿಗೆ ಸಂಬಂಧಿಸಿದಂತೆ ಇಂದು ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಲಾಯಿತು. ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಕುಮಾರ್ ಬಂಗಾರಪ್ಪ ಅವರೊಂದಿಗೆ ಅಧಿಕಾರಿಗಳು ಮತ್ತು ಆಯೋಜಕರು ಕ್ರೀಡಾಂಗಣಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ವೀಕ್ಷಿಸಿದರು.

BLDE ಆವರಣದಲ್ಲಿನ ಬ್ಯಾಡ್ಮಿಂಟನ್ ಕ್ರೀಡಾಂಗಣ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತಾ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು.

ಈ ರಾಜ್ಯ ಮಟ್ಟದ ಕ್ರೀಡಾಕೂಟವು ಯುವ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಲಿದೆ ಎಂದು ಆಯೋಜಕರು ಅಭಿಪ್ರಾಯಪಟ್ಟಿದ್ದಾರೆ. ವಿಶೇಷವಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಪ್ರತಿಭಾವಂತ ಆಟಗಾರರಿಗೆ ರಾಜ್ಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯ ತೋರಲು ಇದು ಮಹತ್ವದ ಅವಕಾಶವಾಗಲಿದೆ ಎಂದು ತಿಳಿಸಿದ್ದಾರೆ.

ಪಂದ್ಯಾವಳಿಯ ಹಿನ್ನೆಲೆಯಲ್ಲಿ ಕ್ರೀಡಾಂಗಣಗಳಲ್ಲಿ ಆಟಗಾರರ ವಸತಿ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಪ್ರೇಕ್ಷಕರ ಆಸನ ವ್ಯವಸ್ಥೆ ಹಾಗೂ ಭದ್ರತಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಕ್ರೀಡಾಪಟುಗಳು ಹಾಗೂ ತರಬೇತುದಾರರು ವಿಜಯಪುರಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಒಂದು ವಾರ ಕಾಲ ನಗರದಲ್ಲಿ ಕ್ರೀಡಾ ಸಂಭ್ರಮ ಮನೆಮಾಡಲಿದೆ.