Home Advertisement
Home ನಮ್ಮ ಜಿಲ್ಲೆ ದಕ್ಷಿಣ ಕನ್ನಡ ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

ಇಂಜಿನಿಯರಿಂಗ್ ವಿದ್ಯಾರ್ಥಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

0
67

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಜಿರಡ್ಕ ದೇವಸ್ಥಾನದ ಸಮೀಪ ಇರುವ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿಗಳ ತಂಡದಲ್ಲಿ ಒಬ್ಬ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲಾದ ದಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ಘಟನೆಯು ಸ್ಥಳೀಯರಲ್ಲಿ ಶೋಕ ವಾತಾವರಣ ನಿರ್ಮಿಸಿದೆ.

ಮೃತ ವಿದ್ಯಾರ್ಥಿಯನ್ನು ಬೆಳಗಾವಿ ಜಿಲ್ಲೆಯ ಗೋಕಾಕ್ ಮೂಲದ ಹಾಗೂ ಉಜಿರೆಯ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ (ಈಸಿಎ) ವ್ಯಾಸಂಗ ಮಾಡುತ್ತಿದ್ದ ಶ್ರೀಪೂರ್ಣ (21) ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಮೇ 19ರಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಏಳು ಮಂದಿ ಸ್ನೇಹಿತರ ತಂಡ ನೇತ್ರಾವತಿ ನದಿಯ ಪಜಿರಡ್ಕ ಭಾಗಕ್ಕೆ ಈಜಲು ತೆರಳಿತ್ತು. ಈ ವೇಳೆ ಆಳವಾದ ನೀರಿಗೆ ಇಳಿದ ಶ್ರೀಪೂರ್ಣ ಅಚಾನಕ್ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಸ್ನೇಹಿತರು ಹಾಗೂ ಸ್ಥಳೀಯರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರೂ, ಯುವಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಪಡೆ ಧಾವಿಸಿ ಶೋಧ ಕಾರ್ಯ ಆರಂಭಿಸಿದರು. ರಾತ್ರಿ ಹೊತ್ತಿನಲ್ಲಿಯೂ ಕಾರ್ಯಾಚರಣೆ ಮುಂದುವರಿದಿದ್ದು, ಸುಮಾರು ರಾತ್ರಿ 9.30ರ ಸುಮಾರಿಗೆ ನದಿಯಲ್ಲಿ ವಿದ್ಯಾರ್ಥಿಯ ಮೃತದೇಹ ಪತ್ತೆಯಾಯಿತು.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಬೇಸಿಗೆ ಕಾಲದಲ್ಲಿ ನದಿ, ಕೆರೆ ಹಾಗೂ ಜಲಾಶಯಗಳಲ್ಲಿ ಯುವಕರು ಎಚ್ಚರಿಕೆ ಇಲ್ಲದೆ ಈಜಲು ಇಳಿಯುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಜಾಗ್ರತೆ ವಹಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.