ಭೋಪಾಲ್: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಟಿ ತ್ವಿಶಾ ಶರ್ಮಾ ಅವರ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ಅತ್ತೆ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶೆ ಗಿರಿಬಾಲಾ ಸಿಂಗ್ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
ಮಧ್ಯಪ್ರದೇಶ ಹೈಕೋರ್ಟ್ ಗಿರಿಬಾಲಾ ಸಿಂಗ್ ಅವರ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದ ಬೆನ್ನಲ್ಲೇ, ಸಿಬಿಐ ಅಧಿಕಾರಿಗಳು ಭೋಪಾಲ್‌ನಲ್ಲಿರುವ ಅವರ ನಿವಾಸಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ.
ತ್ವಿಶಾ ಶರ್ಮಾ ಮೇ 12ರಂದು ಭೋಪಾಲ್‌ನ ಕಟಾರಾ ಹಿಲ್ಸ್‌ನಲ್ಲಿರುವ ತನ್ನ ಪತಿಯ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಈ ಪ್ರಕರಣದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪ ಎದುರಿಸುತ್ತಿದ್ದ ಗಿರಿಬಾಲಾ ಸಿಂಗ್ ಅವರಿಗೆ ಸೆಷನ್ಸ್ ನ್ಯಾಯಾಲಯವು ಈ ಹಿಂದೆ ನಿರೀಕ್ಷಣಾ ಜಾಮೀನು ನೀಡಿತ್ತು.
ಆದರೆ, ಗಿರಿಬಾಲಾ ಸಿಂಗ್ ಅವರು ತನಿಖೆಗೆ ಸಹಕರಿಸುತ್ತಿಲ್ಲ, ಸಾಕ್ಷ್ಯ ನಾಶಪಡಿಸಲು ಯತ್ನಿಸುತ್ತಿದ್ದಾರೆ ಮತ್ತು ಪತ್ರಿಕಾಗೋಷ್ಠಿ ನಡೆಸಿ ಮೃತ ತ್ವಿಶಾ ಅವರ ಚಾರಿತ್ರ್ಯ ವಧೆ ಮಾಡುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲರು ಹಾಗೂ ಸಿಬಿಐ ಹೈಕೋರ್ಟ್‌ನಲ್ಲಿ ಬಲವಾದ ವಾದ ಮಂಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠವು ಬುಧವಾರವಷ್ಟೇ ಅವರ ಜಾಮೀನನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.






















