ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ; ಕೌನ್ಸಿಲರ್ ಸೇರಿ ಐವರು ಸಾವು
ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನ ತುಮಕೂರ್ಲಹಳ್ಳಿ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಳ್ಳಕೆರೆ ಮೂಲದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಒಂದೇ ಊರಿನ ಐವರು ಯುವಕರು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಕದ ವಾತಾವರಣ ಮೂಡಿಸಿದೆ.
ಮೃತರು ಬಳ್ಳಾರಿ ಕಡೆಯಿಂದ ಚಳ್ಳಕೆರೆಯತ್ತ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟಾಟಾ ಇಂಡಿಗೋ ಕಾರು (KA 01 AG 4657) ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರಿನ ಟೈರ್ ಏಕಾಏಕಿ ಸಿಡಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ಕರ್ನಾಟಕ ಪ್ರವಾಸ ಆರಂಭಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ಈ ಭೀಕರ ಅಪಘಾತವು ತುಮಕೂರ್ಲಹಳ್ಳಿ ಗೇಟ್ ಬಳಿಯ ಮಂಜಣ್ಣನ ಡಾಬಾ ಮುಂಭಾಗದಲ್ಲಿ ರಾತ್ರಿ ಸುಮಾರು 10.15ರ ಸುಮಾರಿಗೆ ನಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗಿದ್ದವರು ಹೊರಬರಲಾರದ ಸ್ಥಿತಿ ನಿರ್ಮಾಣವಾಗಿತ್ತು.
ಅಪಘಾತದಲ್ಲಿ ಮೃತಪಟ್ಟವರನ್ನು ಚಳ್ಳಕೆರೆ ಮೂಲದ ಛಾಯಾಗ್ರಾಹಕ ರಾಘವೇಂದ್ರ(40), ರುದ್ರೇಶ್(36), ಸೋಮಶೇಖರ (35) , ಮಲ್ಲಿಕಾರ್ಜುನ, ಪ್ರಮೋದ್(35) ಸ್ಥಳದಲ್ಲೇ ಮೃತಪಟ್ಟವರು. ಎಂದು ಗುರುತಿಸಲಾಗಿದೆ. ಇವರಲ್ಲಿ ಪ್ರಮೋದ್ ಅವರು ಚಳ್ಳಕೆರೆ ನಗರಸಭೆಯ ಕೌನ್ಸಿಲರ್ ಆಗಿದ್ದರು ಎನ್ನಲಾಗಿದೆ.
ಇದನ್ನೂ ಓದಿ: ರಾಜ್ಯಪಾಲರಿಂದ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ
ಅಪಘಾತದ ಭೀಕರ ಸದ್ದು ಕೇಳಿ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಮೊಳಕಾಲ್ಮೂರು ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಬಳಿಕ ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಮೊಳಕಾಲ್ಮೂರು ತಾಲ್ಲೂಕು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಯಿತು.
ಒಂದೇ ಪ್ರದೇಶದ ಐವರು ಯುವಕರು ಒಂದೇ ಅಪಘಾತದಲ್ಲಿ ಮೃತಪಟ್ಟಿರುವುದು ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಚಳ್ಳಕೆರೆ ಪಟ್ಟಣದಲ್ಲಿ ಸೂತಕದ ಛಾಯೆ ಆವರಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ
ಈ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.





















