SK Home Ad
Home ನಮ್ಮ ಜಿಲ್ಲೆ ಉತ್ತರ ಕನ್ನಡ ಅಂಕೋಲಾ ಬಳಿ ಬಸ್ ಪಲ್ಟಿ: ಓರ್ವ ಸಾವು, ಹಲವರಿಗೆ ಗಾಯ

ಅಂಕೋಲಾ ಬಳಿ ಬಸ್ ಪಲ್ಟಿ: ಓರ್ವ ಸಾವು, ಹಲವರಿಗೆ ಗಾಯ

0
125

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಬಸ್; ಟ್ರಾಫಿಕ್ ಜಾಮ್

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್ ಕಂಚಿನಬಾಗಿಲು (ಅಡ್ಲೂರು) ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಬಸ್ಸಿನಲ್ಲಿ ಒಟ್ಟು 36 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಮುಂಜಾನೆ ವೇಳೆ ವೇಗವಾಗಿ ಸಾಗುತ್ತಿದ್ದ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಲ್ಲೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದಿದೆ. ಅಪಘಾತದ ತೀವ್ರತೆಗೆ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು 21 ಮಂದಿ ಗಾಯಗೊಂಡಿದ್ದು, ಅವರಲ್ಲಿ 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ತನಿಖೆಯಲ್ಲಿ ಚಾಲಕನಿಗೆ ನಿದ್ರೆ ತೂಕಡಿಕೆ ಬಂದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಆದರೆ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಬಸ್ ರಸ್ತೆಗೆ ಅಡ್ಡವಾಗಿ ಬಿದ್ದಿದ್ದರಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ನೂರಾರು ವಾಹನಗಳು ಸಾಲುಗಟ್ಟಿ ನಿಂತು ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಂಕೋಲಾ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಬಸ್ಸಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆದಲು ಕಿಟಕಿ ಗಾಜುಗಳನ್ನು ಒಡೆದು ರಕ್ಷಣೆ ಕಾರ್ಯ ಕೈಗೊಳ್ಳಲಾಯಿತು. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ತಕ್ಷಣವೇ ಹೊರತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.

ಗಾಯಗೊಂಡ 21 ಮಂದಿಯನ್ನು ಮೊದಲು ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ತಲೆ, ಎದೆ ಸೇರಿದಂತೆ ಗಂಭೀರ ಗಾಯಗಳಾಗಿದ್ದ 9 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ (KRIHMS) ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಬಳಿಕ ಪೊಲೀಸರು ಮತ್ತು ಹೆದ್ದಾರಿ ಸಿಬ್ಬಂದಿ ಬೃಹತ್ ಕ್ರೇನ್ ಸಹಾಯದಿಂದ ಪಲ್ಟಿಯಾದ ಬಸ್ಸನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಕೆಲ ಗಂಟೆಗಳ ಕಾಲ ಅಸ್ತವ್ಯಸ್ತವಾಗಿದ್ದ ವಾಹನ ಸಂಚಾರವನ್ನು ನಂತರ ಪುನಃ ಆರಂಭಿಸಲಾಯಿತು.

ಈ ಅಪಘಾತವು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದ್ದು, ಹೆದ್ದಾರಿಗಳಲ್ಲಿ ದೀರ್ಘ ಪ್ರಯಾಣ ಮಾಡುವ ಬಸ್ ಚಾಲಕರ ಕೆಲಸದ ಸಮಯ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ.