ಕಲಬುರಗಿ: 2029ರಲ್ಲೂ ದೇಶದಲ್ಲಿ ಮತ್ತೆ ಮೋದಿ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಆರ್‌ಪಿಐ ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ರಾಮದಾಸ್ ಅಠವಲೆ ಭವಿಷ್ಯ ನುಡಿದರು.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಎಲ್ಲಾ ರಂಗಗಳಲ್ಲೂ ವಿಫಲವಾಗಿದೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಟೀಕೆಗೆ ತಿರುಗೇಟು ನೀಡಿದರು.
ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಸಂಪೂರ್ಣ ಅಧಿಕಾರ ಇದೆ. ಏಕೆಂದರೆ ಅವರು ವಿರೋಧ ಪಕ್ಷದಲ್ಲಿದ್ದಾರೆ. ವಿರೋಧ ಪಕ್ಷದಲ್ಲಿದ್ದಾಗ ಸರ್ಕಾರದ ವಿರುದ್ಧ ಟೀಕೆ ಟಿಪ್ಪಣಿ ಮಾಡುವುದು ಅವರ ಕರ್ತವ್ಯ. ಅವರು ಮಾತನಾಡಲಿ, ನಮ್ಮದೇನೂ ಅಭ್ಯಂತರವಿಲ್ಲ ಎಂದರು.
ಕರ್ನಾಟಕದ ಹಿರಿಯ ರಾಜಕಾರಣಿಯಾದ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷದಲ್ಲೇ ಕಳೆದಿದ್ದಾರೆ. ಆದರೆ, ಅವರಿಗೆ ಮುಖ್ಯಮಂತ್ರಿಯಾಗುವ ಅವಕಾಶಗಳಿದ್ದಾಗ ಪಕ್ಷ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ. ಈಗ ಅಧಿಕಾರವಿಲ್ಲದ ಸಮಯದಲ್ಲಿ ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ವೈಯಕ್ತಿಕ ಬಾಂಧವ್ಯವನ್ನು ಸ್ಮರಿಸಿದ ಅಠವಲೆ, ರಾಜಕೀಯ ಏನೇ ಇರಲಿ, ಖರ್ಗೆ ಅವರು ನಮ್ಮ ಒಳ್ಳೆಯ ಮಿತ್ರರಾಗಿದ್ದಾರೆ ಎಂದು ತಿಳಿಸಿದರು.
ಕಳೆದ 12 ವರ್ಷಗಳ ಅವಧಿಯಲ್ಲಿ ಒಂದೇ ಒಂದು ಬಾರಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿಲ್ಲ. ಮಧ್ಯ ಪ್ರಾಚ್ಯದಲ್ಲಿ ಯುದ್ದದ ಕಾರ್ಮೋಡ ಇರುವುದರಿಂದ ಹಾಗೂ ದೇಶದ ಆರ್ಥಿಕತೆ ಕುಸಿಯಬಾರದು ಎಂಬ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ ಎಂದು ಸಮರ್ಥಿಸಿಕೊಂಡರು.






















