ದಾವಣಗೆರೆ: ಹರಿಹರದ ಪಂಚಮಸಾಲಿ ಮಠ ಹಾಗೂ ಅದರ ಆವರಣದಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭ ಮತ್ತು ಪತ್ರಿಕಾಗೋಷ್ಠಿಗಳನ್ನು ನಡೆಸದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) 2023ರ ಕಲಂ 163ರಡಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಮಠದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ನಡೆದ ಸಭೆಗಳು ಹಾಗೂ ಪತ್ರಿಕಾಗೋಷ್ಠಿಗಳ ಸಂದರ್ಭದಲ್ಲಿ ಉದ್ರೇಕಕಾರಿ ಹೇಳಿಕೆಗಳು ಮತ್ತು ಭಾಷಣಗಳು ನಡೆದಿದ್ದು, ಅವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದರಿಂದ ಸಾರ್ವಜನಿಕ ಶಾಂತಿ ಭಂಗವಾಗುವ ಸಾಧ್ಯತೆ, ಸಾರ್ವಜನಿಕ ಹಾಗೂ ಮಠದ ಆಸ್ತಿಪಾಸ್ತಿಗಳಿಗೆ ಹಾನಿಯಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಆದೇಶದ ಪ್ರಕಾರ, 2026ರ ಜೂನ್ 1ರಿಂದ ಜೂನ್ 15ರವರೆಗೆ ಮಠ ಹಾಗೂ ಅದರ ಆವರಣದಲ್ಲಿ ಧಾರ್ಮಿಕ ಪೂಜಾ ವಿಧಾನಗಳನ್ನು ಹೊರತುಪಡಿಸಿ ಯಾವುದೇ ಸಭೆ, ಸಮಾರಂಭ ಅಥವಾ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ಇರುವುದಿಲ್ಲ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.






















