ಶಿವಮೊಗ್ಗ: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದೆ. ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರಾ ನದಿ ತುಂಬಿ ಹರಿಯುತ್ತಿದೆ. ಇದರಿಂದಾಗಿ ಭದ್ರಾ ಡ್ಯಾಂಗೆ 21,180 ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಭದ್ರಾ ಜಲಾಶಯದಿಂದ ನೀರು ಬಿಡುಗಡೆ ಮಾಡುವ ಕುರಿತು ಹಲವು ಸುದ್ದಿಗಳು ಹರಿದಾಡುತ್ತಿದೆ. ಆದ್ದರಿಂದ ಪ್ರಕಟಣೆ ಮೂಲಕ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಸ್ಪಷ್ಟನೆಯನ್ನು ನೀಡಿದ್ದಾರೆ.
ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20-25,000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರು ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುವುದು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿರುತ್ತದೆ.
ಆದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡದೇ, ನದಿಗೆ ನೀರು ಬಿಡಲಾಗುತ್ತಿದೆ ಎಂದು ಕಛೇರಿಗೆ ಕರೆ ಮಾಡುತ್ತಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡ್ಯಾಂನ ಸದ್ಯದ ನೀರಿನ ಮಟ್ಟ 2101.50 ಅಡಿಗಳು.
ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಸಂಗ್ರಹಣೆ ಕುರಿತು ನಿಯಮ ಪಾಲನೆ ಮಾಡಲಾಗುತ್ತಿದೆ. ಈ ನಿಯಮದಂತೆ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾದಲ್ಲಿ, ಹೆಚ್ಚುವರಿ ನೀರನ್ನು ಹೊರಬಿಡಬೇಕಾಗಿರುತ್ತದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.
ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕು. ನದಿ ಪಾತ್ರದಲ್ಲಿ ಜನರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳ ಜನರ ಜೀವನಾಡಿಯಾಗಿದೆ ಭದ್ರಾ ನದಿ. ಲಕ್ಕವಳ್ಳಿಯಲ್ಲಿರುವ ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಿದರೆ ಅದು ಶಿವಮೊಗ್ಗ ಸಮೀಪದ ಕೂಡಲಿಯಲ್ಲಿ ತುಂಗಾ ನದಿಯನ್ನು ಸೇರಿ ತುಂಗಭದ್ರಾ ಆಗಿ ದಾವಣಗೆರೆ, ಹಾವೇರಿ, ಗದಗ ಮೂಲಕ ತುಂಗಭದ್ರಾ ಡ್ಯಾಂಗೆ ತಲುಪುತ್ತದೆ.
ಶನಿವಾರ ಸಂಜೆ 4 ಗಂಟೆಯ ಮಾಹಿತಿಯಂತೆ ತುಂಗಭದ್ರಾ ಡ್ಯಾಂ ಒಳಹರಿವು 93,216 ಕ್ಯುಸೆಕ್. ಹೊರ ಹರಿವು 61,470 ಕ್ಯುಸೆಕ್ ಆಗಿದೆ. ತುಂಗ ಮತ್ತು ಭದ್ರಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗೆ ಒಳಹರಿವು ಹೆಚ್ಚಾಗುವ ಸಾಧ್ಯತೆಯೂ ಇದೆ.