ಕೊಡಗು ಜಿಲ್ಲೆಯಲ್ಲಿರುವ ಎಲ್ಲಾ ಅಂಗಡಿ, ಹೋಟೆಲ್, ವಾಣಿಜ್ಯ ಸಂಕೀರ್ಣ, ಕೈಗಾರಿಕೋದ್ಯಮ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳು ಹಾಗೂ ಪ್ರವಾಸೋದ್ಯಮ ಕೇಂದ್ರಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಕೆ ಕಡ್ಡಾಯ.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಕುರಿತು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಸಂಬಂಧ ಸರ್ಕಾರದ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಈ ಸಂಬಂಧ ತಮ್ಮ ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ, ವಿದೇಯಕ, 2024 ಈ ಸಂಬಂಧ ಫೆಬ್ರವರಿ, 25ರಂದು ರಾಜ್ಯಪಾಲರಿಂದ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ, ಮಂಜೂರಾತಿ ಪಡೆದ ಎಲ್ಲಾ ಸಂಸ್ಥೆಗಳಿಗೂ ಈ ಕಾಯ್ದೆ ಅನ್ವಯವಾಗಲಿದೆ. ಖಾಸಗಿ ಶಾಲಾ ಕಾಲೇಜುಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್ ಸೇರಿದಂತೆ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಬೇಕು/ ಬರೆಸಿರಬೇಕು ಎಂದರು.
ಜಿಲ್ಲೆಯ ಗಡಿ ಪ್ರದೇಶಗಳು, ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆಗೆ ಪ್ರಥಮ ಆದ್ಯತೆ ನೀಡಬೇಕು. ಈ ಕಾರ್ಯ ಆಗದಿದ್ದಲ್ಲಿ ಪ್ರಥಮ ಹಂತದಲ್ಲಿ 5 ಸಾವಿರ, ಎರಡನೇ ಹಂತದಲ್ಲಿ 10 ಸಾವಿರ ದಂಡ ಪಾವತಿಸಬೇಕಾಗುತ್ತದೆ. ನಂತರ ಪರವಾನಿಗೆಯನ್ನು ರದ್ದು ಪಡಿಸಲಾಗುತ್ತದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ಸ್ಥಳೀಯ ಸಂಸ್ಥೆ ವ್ಯಾಪ್ತಿಯ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಕೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇಶಕರಾದ ಕುಮಾರ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಅನುಷ್ಠಾನ ಬಗ್ಗೆ ವಿವರಿಸಿದರು.