ಹಾವೇರಿ: ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಮುಂಬರುವ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದರು.
ಇಲ್ಲಿನ ಮುನ್ಸಿಪಲ್ ಮೈದಾನದಲ್ಲಿ ಕಿಕ್ಕಿರಿದು ಸೇರಿದ್ದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕರು ಕೇಂದ್ರ, ರಾಜ್ಯ ಸರ್ಕಾರಗಳು ಡಬಲ್ ಎಂಜಿನ್ ಸರ್ಕಾರವಲ್ಲ, ಬದಲಾಗಿ ಡಬ್ಬಾ ಸರ್ಕಾರ ಎಂದು ಜರಿದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಟುಟೀಕೆ ಮಾಡಿದರು.
ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಇವತ್ತು ಮತ್ತೆ ರಾಜ್ಯಕ್ಕೆ ಮೋದಿ ಬಂದಿದ್ದಾರೆ. ಪ್ರಧಾನಿ ಮೋದಿ ಈಗ ವಾರಕ್ಕೊಮ್ಮೆ ರಾಜ್ಯಕ್ಕೆ ಬರ್ತಿದ್ದಾರೆ. ಈಗ ಬಿಜೆಪಿಯವರ ಬಂಡವಾಳವೇ ಮೋದಿ. ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹೀಗಾಗಿ ಮೋದಿ ನೋಡಿ ಮತ್ತೆ ರಾಜ್ಯದ ಜನ ವೋಟ್ ಹಾಕ್ತಾರೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.