Home Advertisement
Home ನಮ್ಮ ಜಿಲ್ಲೆ ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ: ಮುಖ್ಯಮಂತ್ರಿ ಹರ್ಷ

ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಆಯ್ಕೆ: ಮುಖ್ಯಮಂತ್ರಿ ಹರ್ಷ

0
110
CM

ಶಿಗ್ಗಾಂವಿ: ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಅವರು ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಹಾಗೂ ಸಂತಸ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಶಿಗ್ಗಾಂವಿ ಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬ್ರಿಟಿಷರು ಭಾರತವನ್ನು 200 ವರ್ಷಗಳ ಕಾಲ ಆಳಿದರು. ಅವರು ಈ ಬೆಳವಣಿಗೆಯನ್ನು ನಿರಿಕ್ಷಿರಲಾರರು. ಭಾರತೀಯರು ವಿಶ್ವದಲ್ಲಿ ಎಲ್ಲ ರಂಗಗಳಲ್ಲಿ ಮುಂದಿದ್ದಾರೆ. ಹಲವು ದೇಶಗಳಲ್ಲಿ ಸಂಸದರಾಗಿಯೂ ಆಯ್ಕೆಯಾದವರಿದ್ದಾರೆ. ಇದೀಗ ರಿಷಿ ಸುನಕ್ ಅವರು ಬ್ರಿಟನ್ ಪ್ರಧಾನಿಯಾಗುವುದು ಅತ್ಯಂತ ವಿಶೇಷವಾದುದು. ಚಕ್ರ ಪೂರ್ತಿ ತಿರುಗಿದೆ ಎಂದು ಅಭಿಪ್ರಾಯ ಪಟ್ಟರು.
ಶಿಗ್ಗಾಂವಿ ಯಲ್ಲಿ ಕಿತ್ತೂರು ಚೆನ್ನಮ್ಮನ ಸ್ಮರಣಾರ್ಥ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿಗಳು ರಾಣಿ ಚೆನ್ನಮ್ಮನ ಪ್ರೇರಣೆಯಿಂದ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ 5 ಲಕ್ಷ ವರೆಗೆ ಬೀಜಧನ ಹಾಗೂ ಸಾಲ ಸೌಲಭ್ಯ ಒದಗಿಸುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಈ ಯೋಜನೆಯಡಿ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಮತ್ತಿತರ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು. ಇದೇ ರೀತಿ ಸ್ವಾಮಿ ವಿವೇಕಾನಂದ ಯುವಶಕ್ತಿ ಸಂಘಗಳ ಮೂಲಕ ಯುವಕರಿಗೆ ನೆರವು ನೀಡಲಾಗುವುದು. ಡಿಸೆಂಬರ್‌ನಲ್ಲಿ ಎರಡೂ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸುವ ಅಧ್ಯಾದೇಶ ಜಾರಿಗೆ ಬಂದಿರುವುದು ನಿಜಕ್ಕೂ ಸಂತಸ ತಂದಿದೆ. ಈ ಸಮುದಾಯಗಳ 50 ವರ್ಷದ ಬೇಡಿಕೆ ಈಡೆರಿಸಿದಂತಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಆಧರಿಸಿ, ಸುಗ್ರೀವಾಜ್ಞೆ ಹೊರಡಿಸಲಾಗಿದ್ದು ಮುಂದಿನ ಅಧಿವೇಶನದಲ್ಲಿ ಅಂಗೀಕಾರ ಪಡೆದು, ಸಂವಿಧಾನದ 9ನೆ ಪರಿಚ್ಛೇದದಲ್ಲಿ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.